ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಾರ್ಕಳ ತಾಲೂಕು, ತಾಲೂಕು ಜನಜಾಗೃತಿ ವೇದಿಕೆ, ಕುಕ್ಕುಂದೂರು ವಲಯದ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮತ್ತು ಜನಜಾಗೃತಿ ವೇದಿಕೆ ಹಾಗೂ ಕಾರ್ಕಳ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಸೆ. 2 ರಂದು ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಕಮಲಾಕ್ಷ ನಾಯಕ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ನಂದ ಕುಮಾರ್ ಪಿ. ಮಾತನಾಡಿ, ಮಾದಕ ವ್ಯಸನವೆಂಬುದು ಮಾರಣಾಂತಿಕ ರೋಗ. ವಿಶ್ವ ಆರೋಗ್ಯ ಸಂಸ್ಥೆಯ ಕಳೆದ ಸಂಶೋಧನೆಯ ಪ್ರಕಾರ ನಮ್ಮ ದೇಶದಲ್ಲಿ ಒಂದು ವರ್ಷಕ್ಕೆ 5 ಲಕ್ಷ ಜನರು ಮದ್ಯಪಾನದಿಂದ ಮರಣ ಹೊಂದಿದರೆ, 14.5 ಲಕ್ಷ ಜನರು ಮಾದಕ ದ್ರವ್ಯ, ಮಾದಕ ವ್ಯಸನ ಅಥವಾ ಇನ್ನಿತರ ಚಟಗಳಿಂದ ಬಲಿಯಾಗುತ್ತಿರುವುದು ಶೋಚನೀಯ. ವಿದ್ಯಾರ್ಥಿಗಳ ವಯಸ್ಸು ಹದಿಹರೆಯದ ವಯಸ್ಸು. ಈ ವಯಸ್ಸಿನಲ್ಲಿ ನಕಾರಾತ್ಮಕ ಚಿಂತನೆಗಳಿಂದಾಗಿ ಮಾದಕ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ. ದೃಢ ನಿಲುವು, ಭಾವ ನಿಯಂತ್ರಣ, ಧನಾತ್ಮಕ ಚಿಂತನೆ, ಕರ್ತವ್ಯ ಪ್ರಜ್ಞೆ, ಮತ್ತು ಪ್ರೀತಿ ವಿಶ್ವಾಸಗಳಿಂದ ವ್ಯಸನ ಮುಕ್ತ ಜೀವನವನ್ನು ನಡೆಸಲು ಸಾಧ್ಯ. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣದ ಅರಿವು ಮೂಡಿಸುವುದು ಅವಶ್ಯ ಎಂದರು.
ಪ್ರತಿಜ್ಞಾ ವಿಧಿ
ಆರೋಗ್ಯವಂತ ಶರೀರವೇ ಆತ್ಮದ ಅರಮನೆ. ಅನಾರೋಗ್ಯವಂತ ಶರೀರವೇ ಆತ್ಮದ ಸೆರೆಮನೆ. ಆರೋಗ್ಯಪೂರ್ಣ ವ್ಯಕ್ತಿಗಳನ್ನು ಸಮಾಜಕ್ಕೆ ಕೊಡುವಲ್ಲಿ ನಮ್ಮೆಲ್ಲರ ಪಾತ್ರವಿದೆ. ಬಹುತೇಕ ಯುವಜನತೆ ಬಾಹ್ಯ ವ್ಯಕ್ತಿಗಳ ಪ್ರಭಾವದಿಂದ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಕಲ್ಪ ಮಾಡೋಣ ಎಂದು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾಲೇಜು ಪ್ರಾಂಶುಪಾಲ ಚೇತನ್ ಟಿ. ಎಂ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪನ್ಯಾಸಕರಾದ ಬಾಲಚಂದ್ರ ಹೆಬ್ಬಾರ್, ಹರೀಶ್ ಮತ್ತು ಮೇಲ್ವಿಚಾರಕ ಪ್ರಸಾದ್ ಕುಮಾರ್, ಸೇವಾಪ್ರತಿನಿಧಿಗಳಾದ ನಳಿನಾಕ್ಷಿ, ಆಶಾ, ಉಪಸ್ಥಿತರಿದ್ದರು. ಮೇಲ್ವಿಚಾರಕ ಪ್ರಸಾದ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.