ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ
ಉಡುಪಿ : ಚುನಾವಣೆಯಲ್ಲಿ ಟಿಕೆಟ್ ಕೊಡಿಸುತ್ತೇನೆಂದು ನಂಬಿಸಿ ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಬೈಂದೂರಿನ ವ್ಯಕ್ತಿಯೊಬ್ಬರಿಗೆ ಕೋಟಿಗಟ್ಟಲೆ ಹಣ ಪಡೆದು ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಪೊಲೀಸರು ಖ್ಯಾತ ವಾಗ್ಮಿ ಚೈತ್ರಾ ಕುಂದಾಪುರ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ.
ಹಿಂದೂ ಸಂಘಟನೆ ಕಾರ್ಯಕರ್ತೆಯಾಗಿರುವ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆದುಕೊಂಡು ಹೊಗಿದ್ದಾರೆ ಎಂದು ತಿಳಿದುಬಂದಿದೆ.
ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪತ್ರಕರ್ತೆಯಾಗಿದ್ದ ಚೈತ್ರಾ ಕುಂದಾಪುರ ಬಳಿಕ ಹಿಂದುತ್ವ ಕಾರ್ಯಕರ್ತೆಯಾಗಿ ಬದಲಾಗಿ ವಾಗ್ಮಿಯಾಗಿ ಗುರುತಿಸಿಕೊಂಡಿದ್ದರು.
ಗೋವಿಂದಬಾಬು ಪೂಜಾರಿಗೆ ಚೈತ್ರಾ ಕುಂದಾಪುರ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿಯವರು ಚೈತ್ರಾ ಕುಂದಾಪುರ ಹೇಳಿದಂತೆ ಆಗಾಗ ಬೆಂಗಳೂರಿಗೆ ಬರುತ್ತಿದ್ದರು.ಇಲ್ಲಿ ಚೈತ್ರಾ ಕುಂದಾಪುರ ಕೆಲವರನ್ನು ತೋರಿಸಿ ಇವರಿಗೆ ಹೈಕಮಾಂಡ್ ನಾಯಕರ ಜೊತೆ ನಿಕಟ ಸಂಪರ್ಕವಿದ್ದು, ಇವರು ಹೇಳಿದರೆ ಟಿಕೆಟ್ ಕೊಡಿಸುತ್ತಾರೆ ಎಂದು ಹೇಳಿ ಮರುಳು ಮಾಡಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿ ಟಿಕೆಟ್ ಸಿಗತ್ತೆ ಅನ್ನುವ ಆಸೆಗೆ ಕೇಳಿದಷ್ಟು ಹಣ ಕೊಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಕುಂದಾಪುರ ಒಟ್ಟು 4 ಕೋಟಿ ರೂಪಾಯಿ ಹಣ ಪಡೆದಿದ್ದರು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್ ಸಿಗಲಿಲ್ಲ. ಬಳಿಕ ಗೋವಿಂದಬಾಬು ಪೂಜಾರಿ ಕೊಟ್ಟ ಹಣವನ್ನು ವಾಪಸ್ಸು ಕೇಳಿದ್ದಾರೆ. ಆದರೆ ಚೈತ್ರಾ ಕುಂದಾಪುರ ಹಣ ನೀಡದೆ ವಂಚಿಸಿದ್ದಾರೆ ಎಂದು ಗೋವಿಂದಬಾಬು ಪೂಜಾರಿ ಅವರು ದೂರು ದಾಖಲಿಸಿದ್ದಾರೆ.
ಗೋವಿಂದಬಾಬು ಪೂಜಾರಿ ದೂರಿನ ಆಧಾರದ ಮೇಲೆ ಸದ್ಯ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.