ಮಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಚೈತ್ರಾ ಕುಂದಾಪುರ ಪ್ರಕರಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಸೆ. 14 ರಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಕಠಿಣ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು ಎಂದರು. ಟಿಕೆಟ್ ಕೊಡಿಸುತ್ತೇವೆ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಹೋರಾಟ ಹಲವರು ಮಾಡುತ್ತಾರೆ, ಆದರೆ ಅವೆಲ್ಲದ್ದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ತನಿಖೆ ಆಗಲಿ, ದೊಡ್ಡ ದೊಡ್ಡ ಹೆಸರನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ. ಆದರೆ ತನಿಖೆ ಆಗಿ ಅದರ ಸತ್ಯ ಹೊರ ಬರಲಿ ಎಂದು ಆಗ್ರಹಿಸಿದರು.