ಕಾಶ್ಮೀರ : ಮೂವರು ಯೋಧರು ಹುತಾತ್ಮ

ಅನಂತನಾಗ್‌ ಜಿಲ್ಲೆಯಲ್ಲಿ ಉಗ್ರರ ಜತೆಗೆ ಭೀಕರ ಕಾಳಗ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರ ಜತೆ ಗುಂಡಿನ ಕಾಳಗದಲ್ಲಿ ಇಬ್ಬರು ಸೇನಾಧಿಕಾರಿಗಳು ಮತ್ತು ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ.
ಕರ್ನಲ್ ದರ್ಜೆಯ ಅಧಿಕಾರಿ, ಸೇನೆಯ ರಾಷ್ಟ್ರೀಯ ರೈಫಲ್ಸ್ ಘಟಕದ ಮೇಜರ್ ಶ್ರೇಣಿಯ ಇಬ್ಬರು ಅಧಿಕಾರಿಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಉಪ ಅಧೀಕ್ಷಕರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋಂಚಕ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಹಿಮನ್ಯುನ್ ಮುಜಾಮಿಲ್ ಭಟ್ ಅವರು ಗುಂಡಿನ ಚಕಮಕಿಯಲ್ಲಿ ಹತರಾಗಿದ್ದು, ಕರ್ನಲ್ ಮನ್‌ಪ್ರೀತ್ ಸಿಂಗ್ ಅವರು 19 ರಾಷ್ಟ್ರೀಯ ರೈಫಲ್ಸ್ (19 RR) ಘಟಕದ ಕಮಾಂಡಿಂಗ್ ಅಧಿಕಾರಿಯಾಗಿದ್ದರು.
ಅನಂತನಾಗ್‌ನ ಕೋಕರ್‌ನಾಗ್ ಪ್ರದೇಶದ ದಟ್ಟ ಅರಣ್ಯದಲ್ಲಿ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯ ನಡುವೆ ಪೊಲೀಸ್ ಅಧಿಕಾರಿಯ ಮೃತದೇಹವನ್ನು ಹೊರತೆಗೆಯಲಾಗಿದೆ.
ಎನ್‌ಕೌಂಟರ್ ಸ್ಥಳದಲ್ಲಿ ಕಣ್ಗಾವಲು ಮತ್ತು ತೆರವು ಕಾರ್ಯಾಚರಣೆಗಾಗಿ ಸೇನೆಯ ಚೀತಾ ಹೆಲಿಕಾಪ್ಟರ್‌ಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ಪಡೆದ ನಂತರ ನಿನ್ನೆ ತಡರಾತ್ರಿ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಕಮಾಂಡಿಂಗ್ ಆಫೀಸರ್ ಮತ್ತು ಡೆಪ್ಯುಟಿ ಸೂಪರಿಂಟೆಂಡೆಂಟ್ ನೇತೃತ್ವದ ಪಡೆಗಳು ಉಗ್ರರ ವಿರುದ್ಧ ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ತೊಡಗಿವೆ. ಈ ಕಾರ್ಯಾಚರಣೆಯಲ್ಲಿ ಈ ವರೆಗೂ ಮೂವರು ಅಧಿಕಾರಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳಾಂತರಿಸಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.
ಕಳೆದ 24 ಗಂಟೆಗಳಲ್ಲಿ ಇದು ಎರಡನೇ ಉಗ್ರರೊಂದಿಗಿನ ಮುಖಾಮುಖಿಯಾಗಿದೆ. ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಭೀಕರ ಎನ್‌ಕೌಂಟರ್‌ನಲ್ಲಿ ಒಬ್ಬ ಸೇನಾ ಯೋಧ ಹುತಾತ್ಮರಾಗಿದ್ದರು ಮತ್ತು ಮೂವರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಕೂಡ ಹತರಾಗಿದ್ದು, ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

error: Content is protected !!
Scroll to Top