ನಾಳೆ ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಹಾಜರಾಗಲಿರುವ ಪ್ರಜ್ವಲ್
ಹೊಸದಿಲ್ಲಿ : ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.
ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಪ್ರಜ್ವಲ್ ರೇವಣ್ಣ ವಿರುದ್ಧ ಎ.ಮಂಜು ಮತ್ತು ದೇವರಾಜೇ ಗೌಡ ಎಂಬವರು ಹೈಕೋರ್ಟ್ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಇದರಿಂದ ಸಂಕಷ್ಟ ಸಿಲುಕಿದ್ದ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಿಜೆಐ ಪೀಠ ಕರ್ನಾಟಕ ಹೈಕೋರ್ಟ್‌ನ ಅಸಿಂಧು ಆದೇಶಕ್ಕೆ ತಡೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಧನಂಜಯ ಚಂದ್ರಚೂಡ್, ಪರಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠ ಮುಂದಿನ ಕೆಲವು ಷರತ್ತುಗಳನ್ನು ವಿಧಿಸಿ ನಾಲ್ಕು ವಾರಗಳ ಅವಧಿಗೆ ಈ ತಡೆಯಾಜ್ಞೆ ನೀಡಿದೆ. ಲೋಕಸಭೆ ಅಧಿವೇಶನದಲ್ಲಿ ಸಂಸದ ಪ್ರಜ್ವಲ್ ರೇವಣ್ಣಗೆ ಯಾವುದೇ ವೋಟಿಂಗ್ ಪವರ್ ಇರುವುದಿಲ್ಲ. ಸರ್ಕಾರದಿಂದ ಬರುವ ಭತ್ಯೆಗಳನ್ನು ಪಡೆಯುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ. ತೀರ್ಪಿನ ಬೆನ್ನಲ್ಲೇ ನಾಳೆ ಸಂಸತ್ ಕಲಾಪಕ್ಕೆ ಹಾಜರಾಗುವಂತೆ ದೇವೇಗೌಡ ಅವರು ಪ್ರಜ್ವಲ್ಗೆ ಹೇಳಿದ್ದಾರೆ.