ಸರಕಾರಿ ಕಚೇರಿ, ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿ ನಿಷೇಧ

ಸರಕಾರಿ ಹಾಗೂ ಸರಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯ, ಸರ್ಕಾರದಿಂದ ಅನುದಾನ ಪಡೆಯುವ ಸಂಸ್ಥೆಗಳಿಗೆ ಅನ್ವಯ

ಬೆಂಗಳೂರು: ಸರಕಾರಿ ಸಭೆ ಸಮಾರಂಭಗಳಲ್ಲಿ ಮತ್ತು ಸರಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆ ಹಾಗೂ ಸರಬರಾಜು ನಿಷೇಧಿಸಲಾಗಿದೆ.
ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮಂಗಳವಾರ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಸರಕಾರದ ವತಿಯಿಂದ ಆಯೋಜಿಸಲ್ಪಡುವ ಅಧಿಕೃತ ಸಭೆ ಸಮಾರಂಭಗಳಲ್ಲಿ ಮತ್ತು ಸರಕಾರಿ ಕಚೇರಿಗಳಲ್ಲಿ ಏಕ ಬಳಕೆ ಅಥವಾ ಬಳಸಿ ಎಸೆಯುವ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ/ಸರಬರಾಜನ್ನು ನಿಷೇಧಿಸಿದೆ.
ಸರಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ/ಸಮಾರಂಭಗಳಿಗೆ ಈ ಆದೇಶ ಅನ್ವಯಿಸುತ್ತದೆ.
ಕುಡಿಯುವ ನೀರು ಪೂರೈಸಲು ಗ್ಲಾಸ್, ಸ್ಟೀಲ್ ಲೋಟ ಬಳಕೆ ಮಾಡಲು ಮತ್ತು ಸಾಮೂಹಿಕ ಕುಡಿಯುವ ನೀರು ವಿತರಣಾ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ.
ಈ ಕುರಿತು 2018ರಲ್ಲೇ ಹೊರಡಿಸಿದ್ದ ಆದೇಶವನ್ನು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ಹಿಂದಿನ ಸರಕಾರಿ ಆದೇಶದಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್‌ಗಳು ಹಾಗೂ ದೈನಂದಿನ ಬಳಕೆಯಲ್ಲಿರುವ ಇತರ ಪ್ಲಾಸ್ಟಿಕ್ ವಸ್ತುಗಳು ಅಲ್ಪಾವಧಿ ಹಾಗೂ ದೀರ್ಘಾಧಿಯಲ್ಲಿ ಪರಿಸರಕ್ಕೆ ಹಾನಿಯನ್ನು ಮತ್ತು ಆರೋಗ್ಯಕ್ಕೆ ಅಪಾಯವನ್ನು ಉಂಟುಮಾಡಲು ಕಾರಣವಾಗಿರುತ್ತವೆ. ಈ ಹಿನ್ನೆಯಲ್ಲಿ ಸರಕಾರ ಪ್ಲಾಸ್ಟಿಕ್ ತ್ಯಾಜ್ಯದ ನಿಯಂತ್ರಣಕ್ಕಾಗಿ ಈಗಾಗಲೇ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆಗಳು ಮತ್ತಿತರ ವಸ್ತುಗಳ ತಯಾರಿಕೆ, ಮಾರಾಟ, ದಾಸ್ತಾನು ಮತ್ತು ಉಪಯೋಗವನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿದೆ ಎಂದು ಹೇಳಲಾಗಿತ್ತು.error: Content is protected !!
Scroll to Top