ಮಗನ ಹೇಳಿಕೆಯಿಂದ ಸಿಎಂಗೆ ಮುಜುಗರ; ಕ್ರಮಕ್ಕೆ ಬಿಜೆಪಿ ಒತ್ತಾಯ
ಬೆಂಗಳೂರು: ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಗೆಲ್ಲಲು ಸಿದ್ದರಾಮಯ್ಯ ಕುಕ್ಕರ್ ಮತ್ತು ಇಸ್ತ್ರಿ ಪೆಟ್ಟಿಗೆ ಹಂಚಿದ್ದರು ಎಂದು ಅವರ ಪುತ್ರನೇ ನೀಡಿರುವ ಹೇಳಿಕೆ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಈ ಹೇಳಿಕೆ ಹಿನ್ನೆಲೆಯಲ್ಲಿ ಬಿಜೆಪಿ ಸಿದ್ದರಾಮಯ್ಯ ಮೇಲೆ ಮುಗಿಬಿದ್ದಿದೆ. ಮಗನ ಹೇಳಿಕೆಯಿಂದ ಸಿದ್ದರಾಮಯ್ಯ ಇಕ್ಕಟ್ಟಿಗೆ ಸಿಲುಕಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಯತೀಂದ್ರ ಹೇಳಿಕೆ ನಿಜವಾಗಿದ್ದರೆ, ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.
2023 ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಅವರ ಪುತ್ರ ಡಾ. ಯತೀಂದ್ರ ಅವರು ನೀಡಿರುವ ಹೇಳಿಕೆ ನಿಜವಾಗಿದ್ದರೆ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ.
ಇಂತಹ ಸೂಕ್ಷ್ಮ ವಿಚಾರಗಳನ್ನು ಚುನಾವಣಾ ಆಯೋಗ ಗಮನಿಸಬೇಕಾಗುತ್ತದೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಒಂದು ಚುನಾವಣಾ ತಕರಾರು ಅರ್ಜಿ ಇದೆ. ಡಾ. ಯತೀಂದ್ರ ಹೇಳಿದ್ದಕ್ಕೆ ಸಾಕ್ಷ್ಯಾಧಾರ ಇದ್ದರೆ ಆಯೋಗ ಇದನ್ನು ಪರಿಗಣಿಸಬೇಕಾಗುತ್ತದೆ. ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ನಿಜ ಆಗಿದ್ದರೆ ಇದು ಗಂಭೀರ ಪ್ರಕರಣ ಆಗಲಿದೆ ಎಂದು ಬಸವರಾಜ ಬೊಮ್ಮಾಯಿ ಃೇಳಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಮಡಿವಾಳ ಸಮುದಾಯ ಭವನದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ, ಚುನಾವಣಾ ಸಮಯದಲ್ಲಿ ವರುಣಾ ಕ್ಷೇತ್ರದ ಮಡಿವಾಳ ಸಮುದಾಯ ಮತದಾರರಿಗೆ ಸಮುದಾಯದ ರಾಜ್ಯಾಧ್ಯಕ್ಷ ನಂಜಪ್ಪ ಕುಕ್ಕರ್, ಐರನ್ ಬಾಕ್ಸ್ ವಿತರಿಸಲು ಸಿದ್ದತೆ ಮಾಡಿಕೊಂಡಿದ್ದರು. ಕಾರಣಾಂತರಗಳಿಂದ ಎರಡು-ಮೂರು ಬಾರಿ ಮುಂದೂಡಲಾಗಿತ್ತು. ನಂತರ ತಂದೆಯವರಿಂದ ದಿನಾಂಕ ಪಡೆದು, ಅವರ ಕೈಯಲ್ಲೇ ಕುಕ್ಕರ್ ಹಾಗೂ ಐರನ್ ಬಾಕ್ಸ್ ಕೊಡಿಸಿದರು ಎಂದಿದ್ದಾರೆ.
ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈ ಬಗ್ಗೆ ಶೀಘ್ರವೇ ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು ಎಂದು ವಿರೋಧ ಪಕ್ಷಗಳ ಮುಖಂಡರು ಒತ್ತಾಯಿಸಿದ್ದಾರೆ.