ಗ್ಯಾರಂಟಿ ಯೋಜನೆಗಳು ಆಮಿಷವಲ್ಲ : ಕೋರ್ಟಿನಲ್ಲಿ ಸಿದ್ದರಾಮಯ್ಯ ಪ್ರತಿಪಾದನೆ

ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸಲು ಆಗ್ರಹಿಸಿ ಚುನಾವಣಾ ತಕರಾರು ಅರ್ಜಿ

ಬೆಂಗಳೂರು : ವಿಧಾನಸಭೆ ಚುನಾವಣೆಗೆ ಮುನ್ನ ಜನರಿಗೆ ನೀಡಿದ 5 ಗ್ಯಾರಂಟಿಗಳು ಆಮಿಷಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಲಯದಲ್ಲಿ ಪ್ರತಿಪಾದಿಸಿದ್ದಾರೆ. ಗ್ಯಾರಂಟಿ ಘೋಷಣೆಗಳ ಕುರಿತು ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಹೈಕೋರ್ಟ್‌ನಲ್ಲಿ ಸಮರ್ಥಿಸಿಕೊಂಡಿದ್ದಾರೆ.
ಆರ್ಥಿಕವಾಗಿ ದುರ್ಬಲವಾಗಿರುವ ಹಾಗೂ ಅವಕಾಶ ವಂಚಿತ ವರ್ಗಗಳ ಕಲ್ಯಾಣಕ್ಕೆ ಜಾರಿಗೆ ತರಲಾಗಿರುವ 5 ಗ್ಯಾರಂಟಿ ಯೋಜನೆಗಳು ಸಂವಿಧಾನ ಮತ್ತು ಚುನಾವಣಾ ಆಯೋಗದ ನಿಯಮಗಳು ಹಾಗೂ ಮಾರ್ಗಸೂಚಿಗಳಿಗೆ ಅನುಗುಣವಾಗಿಯೇ ಇವೆ. ಅದೇ ಆಧಾರದ ಮೇಲೆ ತಮ್ಮ ಹಾಗೂ ಇತರ ಶಾಸಕರ ಮೇಲೆ ಹೂಡಿರುವ ಚುನಾವಣಾ ತಕರಾರು ಅರ್ಜಿಗಳನ್ನು ವಜಾಗೊಳಿಸುವಂತೆ ಕೋರಿದ್ದಾರೆ.
ಗ್ಯಾರಂಟಿಗಳ ಹೆಸರಲ್ಲಿ ಮತದಾರರಿಗೆ ಆಮಿಷವೊಡುವ ಮೂಲಕ ಚುನಾವಣಾ ಅಕ್ರಮ ಎಸಗಿ ವರುಣಾ ಕ್ಷೇತ್ರದಲ್ಲಿ ಗೆದ್ದಿರುವ ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ವರುಣಾ ಹೋಬಳಿಯ ಕೂಡನಹಳ್ಳಿಯ ಕೆ. ಎಂ. ಶಂಕರ್ ಎಂಬವರು ಅರ್ಜಿ ಸಲ್ಲಿಸಿದ್ದಾರೆ. ಪ್ರತಿವಾದಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಖಿತ ಹೇಳಿಕೆಯನ್ನು ದಾಖಲೆಗೆ ತೆಗೆದುಕೊಂಡ ನ್ಯಾಯಪೀಠ ವಿಚಾರಣೆಯನ್ನು ಅಕ್ಟೋಬರ್ 6ಕ್ಕೆ ಮುಂದೂಡಿತು.
ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೂಲಕ ಚುನಾವಣಾ ಅಕ್ರಮ ನಡೆಸಲಾಗಿದೆ ಎಂಬ ಅರ್ಜಿದಾರರ ಆರೋಪ ಸಂಪೂರ್ಣ ಸುಳ್ಳು. ಅರ್ಜಿದಾರರ ಈ ವಾದವು ಪ್ರಜಾಪ್ರತಿನಿಧಿ ಕಾಯ್ದೆಯ ತತ್ವಗಳಿಗೆ ವಿರುದ್ಧವಾಗಿದೆ. ನ್ಯಾಯಾಲಯದ ಅಮೂಲ್ಯ ಸಮಯವನ್ನು ಹಾಳು ಮಾಡುವ ಉದ್ದೇಶದಿಂದ ಈ ಅರ್ಜಿ ಸಲ್ಲಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಕಲ್ಯಾಣ ಕಾರ್ಯಕ್ರಮಗಳನ್ನು ಕೋಟ್ಯಂತರ ಕುಟುಂಬಗಳ ಶ್ರೇಯೋಭಿವೃದ್ಧಿಗೆ ರೂಪಿಸಲಾಗಿದೆ. ರಾಜ್ಯದ ನಾಗರಿಕರ ಹಾಗೂ ವಿಶೇಷವಾಗಿ ಮಹಿಳೆಯರ ಸಬಲೀಕರಣ ಮತ್ತು ಉನ್ನತೀಕರಣದ ವಿಶಾಲ ಧ್ಯೇಯದೊಂದಿಗೆ ಗ್ಯಾರಂಟಿ ಯೋಜನೆಗಳನ್ನು ನಿರ್ದಿಷ್ಟವಾಗಿ ರೂಪಿಸಲಾಗಿದೆ. ಇದು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಭಾಗವಾಗಿದೆ ಎಂದು ಸಿದ್ದರಾಮಯ್ಯ ಹೇಳಿಕೆಯಲ್ಲಿ ವಿವರಿಸಿದ್ದಾರೆ.



































































































error: Content is protected !!
Scroll to Top