ಬೆಂಗಳೂರು : ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಅಧ್ಯಯನಗೈಯಲು ಕೇಂದ್ರದಿಂದ ಮೂರು ತಂಡಗಳು ನಾಳೆ ರಾಜ್ಯಕ್ಕೆ ಆಗಮಿಸುತ್ತಿದೆ. ರಾಜ್ಯದಲ್ಲಿ 161 ತೀವ್ರ ಮತ್ತು 34 ಸಾಧಾರಣ ಹೀಗೆ ಒಟ್ಟು 195 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಿಸಿ ಈಗಾಗಲೇ ಕೇಂದ್ರ ಸರಕಾರಕ್ಕೆ ವರದಿ ಕಳುಹಿಸಿದ ಹಿನ್ನಲೆಯಲ್ಲಿ ಬರಗಾಲ ಪರಿಸ್ಥಿತಿ ಅರಿಯಲು ಕೇಂದ್ರ ಸರ್ಕಾರವು ಬರ ಅಧ್ಯಯನ ತಂಡಗಳನ್ನು ರಾಜ್ಯಕ್ಕೆ ಕಳುಹಿಸುತ್ತಿದೆ.
ನಾಳೆಯಿಂದ ಅ. 9ರವರೆಗೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಚಿತ್ರದುರ್ಗ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಒಟ್ಟು 12 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ. ಆದರೆ ಪ್ರವಾಸಕ್ಕೂ ಮುನ್ನ ನಾಳೆ ಕೇಂದ್ರ ತಂಡದ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.
ಈಗಾಗಲೇ 195 ತಾಲೂಕುಗಳು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದ್ದು, ಕೇಂದ್ರದ ಬಳಿ 6 ಸಾವಿರ ಕೋಟಿ ರೂ. ಪರಿಹಾರವನ್ನು ಕೇಳಿದೆ. ಮಾರ್ಗಸೂಚಿಗಳ ಪ್ರಕಾರ, ಮಧ್ಯಮ ಬರಕ್ಕೆ ಕೇಂದ್ರ ಸರ್ಕಾರ ಪರಿಹಾರ ಕೊಡಬಹುದು ಅಥವಾ ಇಲ್ಲದೇ ಇರಬಹುದು. ಬರ ಘೋಷಣೆ ಮನವಿಗೆ ಎಲ್ಲ ಸಿದ್ದತೆ ಮಾಡಿಕೊಂಡಿದ್ದೇವೆ. ಎಲ್ಲ ಬರ ಪೀಡಿತ ತಾಲೂಕುಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲು ಸೂಚನೆ ನೀಡಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದರು.































































