ಮರಳು, ಕಲ್ಲು ಲಾರಿ ಮಾಲಕ -ಚಾಲಕರ ಪ್ರತಿಭಟನೆ ಹಿನ್ನೆಲೆ

ಬೆಂಗಳೂರಿನಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಸಭೆ – ಮುಷ್ಕರ ವಾಪಸ್‌ !

ಬೆಂಗಳೂರು : ಉಡುಪಿ ಜಿಲ್ಲೆಯ ಲಾರಿ ಚಾಲಕ-ಮಾಲಕರ ಬೇಡಿಕೆಗೆ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಕೆಲವೊಂದು ಕಾನೂನು ನಿಯಮ ಸಡಿಲಿಸುವಂತೆ ಉಡುಪಿ ಜಿಲ್ಲೆಯ ಲಾರಿ ಚಾಲಕ- ಮಾಲಕರು, ಕಟ್ಟಡ ಕಾರ್ಮಿಕರು, ಕಲ್ಲು ಗಣಿಗಾರಿಕೆ ಕಾರ್ಮಿಕರು ಕಳೆದ ಸೆ. 27ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡ ಹಿನ್ನೆಲೆಯಲ್ಲಿ ಅ. 5ರಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಜನಪ್ರತಿನಿಧಿಗಳು ಹಾಗೂ ಲಾರಿ ಮಾಲಕರ ಸಂಘದ ಪ್ರಮುಖರೊಂದಿಗೆ ಬೆಂಗಳೂರಿನ ವಿಧಾನ ಸೌಧದ ಮೂರನೇ ಮಹಡಿ (ಕೊಠಡಿ ಸಂಖ್ಯೆ 313)ಯಲ್ಲಿ ಸಭೆ ನಡೆಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ ಹಿನ್ನೆಲೆಯಲ್ಲಿ ಲಾರಿ ಮಾಲಕರು ಮುಷ್ಕರ ವಾಪಸ್‌ ತೆಗೆಯುವ ಸಾಧ್ಯತೆಯಿದೆ.

ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ
ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗ ಕೂಡದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ರಾಜ್ಯ ಪರಿಸರ ಪ್ರಭಾವ ಮೌಲ್ಯ ಮಾಪನ ಪ್ರಾಧಿಕಾರ ಅನುಮತಿ ನೀಡಿದ ಬಳಿಕವೇ ಮರಳು ಬ್ಲಾಕ್ ಗಳಿಗೆ ಅನುಮತಿ ಪತ್ರ ದೊರೆಯುತ್ತದೆ. ಪ್ರಾಧಿಕಾರ ತಿಂಗಳಿಗೊಮ್ಮೆ ಸಭೆ ನಡೆಯುವುದರಿಂದ ವಿಳಂಬವಾಗುತ್ತಿದೆ. ಈ ಪ್ರಕ್ರಿಯೆಗೆ ವೇಗ ನೀಡಬೇಕೆಂದು ಮುಖ್ಯ ಮಂತ್ರಿಗಳು ಪ್ರಾಧಿಕಾರದ ಆಯುಕ್ತರಿಗೆ ಸೂಚಿಸಿದರು.

ಹೊಸ ಮರಳು ನೀತಿ 2020 ಅನ್ನು 2021 ಡಿ. 1 ರಂದು ಜಾರಿಗೆ ತರಲಾಗಿದೆ. ಕಟ್ಟಡ ನಿರ್ಮಾಣ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ಸಾಂಪ್ರದಾಯಿಕವಾಗಿ ಮರಳು ತೆಗೆಯುವವರ ಹಿತಾಸಕ್ತಿಯನ್ನೂ ಕಾಪಾಡಬೇಕಿದೆ. ಕಾರ್ಮಿಕರಿಗೆ ಸಮಸ್ಯೆಯಾಗದಂತೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದರು.

39 ಮರಳು ಬ್ಲಾಕ್‌
Non CRZ ಪ್ರದೇಶದಲ್ಲಿ ಟೆಂಡರ್ ಕಂ ಹರಾಜು ಮೂಲಕ ಗುತ್ತಿಗೆ ಮಂಜೂರು ಮಾಡಲು 39 ಮರಳು ಬ್ಲಾಕ್ ಗಳನ್ನು ಗುರುತಿಸಲಾಗಿದೆ. ಈ ಪೈಕಿ 9 ಬ್ಲಾಕ್ ಗಳ ಟೆಂಡರ್ ಪ್ರಕ್ರಿಯೆ ಯಶಸ್ವಿಯಾಗಿದ್ದು, 30 ಮರಳು ಬ್ಲಾಕ್ ಗಳಿಗೆ ಮರು ಹರಾಜು ಪ್ರಕ್ರಿಯೆ ಶೀಘ್ರ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸಭೆಗೆ ಮಾಹಿತಿ ನೀಡಿದರು.

ಮರಳು ಗಣಿಗಾರಿಕೆಗೆ ಪರವಾನಗಿಯನ್ನು ಜಿಲ್ಲಾಧಿಕಾರಿಗಳ ಮೂಲಕ ನೀಡಲಿ. ಮನೆ ಕಟ್ಟಲು ಅಗತ್ಯವಿರುವ ಸೈಜು ಗಲ್ಲುಗಳಿಗೆ ಗಣಿಗಾರಿಕೆ ಮಾಡಲು ಕಾಯ್ದೆಯ ಸರಳೀಕರಣ ಮಾಡಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಬೇಕು ಎಂದು ಸಭೆಯಲ್ಲಿ ಮನವಿ ಮಾಡಲಾಯಿತು.
ಜಿಲ್ಲಾ ಆಸ್ಪತ್ರೆಯಲ್ಲಿ 9 ಡಯಾಲಿಸಿಸ್ ಯಂತ್ರಗಳು ಕೆಟ್ಟಿದೆ. ಒಂದೇ ಯಂತ್ರ ಕಾರ್ಯನಿರ್ವಹಿಸುತ್ತಿದೆ. ಅಲ್ಲಿನ ಸಿಬ್ಬಂದಿಗೆ 6 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಕೂಡಲೇ ವೇತನ ನೀಡುವಂತೆ ಸಿಎಂ ಸೂಚಿಸಿದರು.

ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್, ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಚಿವರಾದ ಎಚ್.ಸಿ. ಮಹದೇವಪ್ಪ, ಚಲುವರಾಯ ಸ್ವಾಮಿ, ಬಿ. ನಾಗೇಂದ್ರ, ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಮುಖಂಡರಾದ ಗೋಪಲ್ ಪೂಜಾರಿ, ಪ್ರಸಾದ್‌ ಕಾಂಚನ್, ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ದಿನೇಶ್ ಹೆಗ್ಡೆ ಮೊಳಲಿ, ಎಂ.ಎ. ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾದ ಗಿರೀಶ್, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಸಭೆಯಲ್ಲಿ ಪಾಲ್ಗೊಂಡರು.







































error: Content is protected !!
Scroll to Top