7 ಮಂದಿ ಸುಟ್ಟು ಕರಕಲು; 51 ಮಂದಿಗೆ ಗಾಯ
ಮುಂಬಯಿ: ಮುಂಬಯಿಯ ಉಪನಗರ ಗೋರೆಗಾಂವ್ ಪಶ್ಚಿಮದಲ್ಲಿ ಏಳು ಅಂತಸ್ತಿನ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟು 51 ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಆಜಾದ್ ಮೈದಾನದ ಬಳಿಯ ಎಂಜಿ ರಸ್ತೆಯಲ್ಲಿರುವ ಜೈ ಭವಾನಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ ಪರಿಣಾಮ ಕಟ್ಟಡದ ಬಳಿ ಇದ್ದ ಬೈಕು, ಕಾರುಗಳು ಬೆಂಕಿಗಾಹುತಿಯಾಗಿವೆ.
ಏಳು ಅಂತಸ್ತಿನ ಕಟ್ಟಡವಾಗಿದ್ದು ಇದರ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಕಟ್ಟಡಕ್ಕೆ ಆವರಿಸಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದ್ದು, ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.





























































