ಬ್ಯಾನರ್, ಪೋಸ್ಟರ್ ಅಳವಡಿಕೆ-ಭಾಷಣ ಮೆರವಣಿಗೆಗೆ ಅನುಮತಿಯಿಲ್ಲ
ಉಡುಪಿ : ಕೆಲವು ಸಂಘಟನೆಗಳು ಉಡಪಿಯಲ್ಲಿ ಮಹಿಷ ದಸರಾ ಅಚರಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಜಿಲ್ಲೆಯಾದ್ಯಾಂತ ಎರಡು ದಿನ ನಿಷೇಧಾಜ್ಞೆಯನ್ನು ಹೊರಡಿಸಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಕಾನೂನು ಸುವ್ಯವಸ್ಥೆಯನ್ನು ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಅ.14 ಬೆಳಿಗ್ಗೆ 6ರಿಂದ ಜಾರಿಗೆ ಬರುವಂತೆ ಹಾಗೂ ಅ. 15ರ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ. ಮಹಿಷಾ ದಸರಾ ಆಚರಣೆ ಪರ-ವಿರೋಧದ ಯಾವುದೇ ಪೋಸ್ಟರ್, ಬ್ಯಾನರ್, ಬಂಟಿಂಗ್ ಅಳವಡಿಸುವುದು, ಪ್ರತಿಭಟನೆ ಮೆರವಣಿಗೆಗಳನ್ನು ಮಾಡುವುದು, ಅವಹೇಳನಕಾರಿಯಂತಹ ಯಾವುದೇ ಘೋಷಣೆ, ಭಾಷಣ, ಪ್ರಕಟಣೆ ಹೊರಡಿಸುವುದು, ಅವಾಚ್ಯ ಶಬ್ದಗಳ ಬಳಕೆ, ಗಾಯನ ಇತ್ಯಾದಿ ಚಟುವಟಿಕೆಗಳನ್ನು ಜಿಲ್ಲಾಡಳಿತ ನಿಷೇಧಿಸಿದೆ.
ಶಸ್ತ್ರ, ಕತ್ತಿ, ಈಟಿ, ಬಂದೂಕುಗಳು, ಚಾಕು, ಕೋಲುಗಳು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ಆಯುಧಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಪಟಾಕಿಗಳನ್ನು ಸಿಡಿಸುವುದು, ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ.





























































