ಪ್ರಕರಣದ ನ್ಯಾಯಾಂಗ ತನಿಖೆಗೆ ಆಗ್ರಹ
ಬೆಂಗಳೂರು: ಕಲಬುರಗಿ ಜಿಲ್ಲೆಯ ಶಿರೋಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಎಂಬವರ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ, ಸಚಿವ ಸ್ಥಾನದಿಂದ ಶರಣಪ್ರಕಾಶ್ ಪಾಟೀಲ್ ಅವರನ್ನು ವಜಾಗೊಳಿಸುವಂತೆ ಬಿಜೆಪಿ ಆಗ್ರಹಿಸಿದೆ.
ಸಚಿವ ಶರಣ ಪ್ರಕಾಶ್ ಪಾಟೀಲ್ ಅವರ ಕಿರುಕುಳವೇ ನನ್ನ ಸಾವಿಗೆ ಕಾರಣ ಎಂದು ಸಾವಿಗೆ ಮುನ್ನ ಆಡಿಯೋದಲ್ಲಿ ಶಿವಕುಮಾರ್ ಹೇಳಿಕೊಂಡಿದ್ದಾರೆ. ಸರ್ಕಾರ ಈ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಮತ್ತು ತನಿಖಾ ವರದಿ ಬರುವವರೆಗೆ ಸಚಿವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಿನಿಂದ ಜನರ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ. ಧರ್ಮಕ್ಕಾಗಿ ಕೆಲಸ ಮಾಡುವವರನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ. ಮೃತ ಬಿಜೆಪಿ ಕಾರ್ಯಕರ್ತನನ್ನು ಅವರ ಸಂಬಂಧಿಕರ ಕೃಷಿ ಜಮೀನಿನಲ್ಲಿ ಥಳಿಸಲಾಗಿದೆ. ಶಿವಕುಮಾರ್ ಸಾವಿಗೂ ಮುನ್ನ ಆಡಿಯೋದಲ್ಲಿ ಸಚಿವ ಶರಣ ಪ್ರಕಾಶ್ ಪಾಟೀಲ್ ವಿರುದ್ಧ ಆರೋಪ ಮಾಡಿದ್ದಾರೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮೌನವಾಗಿದ್ದಾರೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಕಿಡಿಕಾರಿದ್ದಾರೆ.
ಶಿವಕುಮಾರ್ ಅವರಿಗೆ ಕಿರುಕುಳ ನೀಡಿ ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದ ಎಲ್ಲರನ್ನೂ ಬಂಧಿಸಬೇಕು. ನೈತಿಕ ಹೊಣೆ ಹೊತ್ತು ಶರಣಪ್ರಕಾಶ್ ಪಾಟೀಲ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.















































































