ಬೆಂಗಳೂರು : ಪಿಎಸ್ಐ 545 ಹುದ್ದೆಗಳಿಗೆ ಮರುಪರೀಕ್ಷೆಗೆ ಹೈಕೋರ್ಟ್ ಆದೇಶ ನೀಡಿದೆ. ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದೆ. ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ನೇಮಕಾತಿ ಸಂಬಂಧದ ಅಧಿಸೂಚನೆಯನ್ನು ರದ್ದುಪಡಿಸಿ, ನೂತನವಾಗಿ ಪರೀಕ್ಷೆ ನಡೆಸಲು ಸರಕಾರ ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಆರೋಪ ರಹಿತ ಹಲವು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಮರುಪರೀಕ್ಷೆ ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ನ್ಯಾಯಾದೀಶ ಪಿ.ಎಸ್.ದಿನೇಶ್ ಕುಮಾರ್, ಟಿ. ಜಿ. ಶಿವಶಂಕರೇ ಗೌಡರಿದ್ದ ಪೀಠ ರಾಜ್ಯ ಸರಕಾರದ ಕ್ರಮವನ್ನು ಎತ್ತಿಹಿಡಿದಿದೆ.
545 ಪಿಎಸ್‌ಐಗಳ ನೇಮಕಾತಿಗಾಗಿ ಅಕ್ಟೋಬರ್ 3, 2021 ರಂದು 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ಮಾಡಲಾಗಿತ್ತು. ಒಟ್ಟು 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿದೆ.
ಈ 52 ಅಭ್ಯರ್ಥಿಗಳು ಯಾವುದೇ ಪೊಲೀಸ್ ನೇಮಕಾತಿಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರನ್ನು ಪರೀಕ್ಷೆಯಲ್ಲಿ ರಿಗ್ಲಿಂಗ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಮೃತ್ ಪಾಲ್ರನ್ನು ಬಂಧಿಸಿದ್ದರು. ಇದೀಗ ಎಡಿಜಿಪಿ ಅಮೃತ ಪಾಲ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

























