ದೀಪಾವಳಿ ಅಲಂಕಾರಕ್ಕೆ ವಿದ್ಯುತ್ ಪಡೆದದ್ದಕ್ಕೆ ವಿದ್ಯುತ್ ಕಳ್ಳ ಎಂದು ಕಾಂಗ್ರೆಸ್ ಲೇವಡಿ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನೆಗೆ ದೀಪಾವಳಿ ದೀಪಾಲಂಕಾರಕ್ಕೆ ವಿದ್ಯುತ್ ಕಂಬದಿಂದ ಅಕ್ರಮವಾಗಿ ಸಂಪರ್ಕ ಪಡೆದಿರುವ ವಿಚಾರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಬೆಸ್ಕಾಂ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಈ ನಡುವೆ ಕಿಡಿಗೇಡಿಗಳು ಜೆಡಿಎಸ್ ಕಚೇರಿ ಆವರಣಕ್ಕೆ ವಿದ್ಯುತ್ ಕಳ್ಳ ಕುಮಾರಸ್ವಾಮಿ ಎಂಬ ಪೋಸ್ಟರ್ ಅಂಟಿಸಿದ್ದಾರೆ.
ಕುಮಾರಸ್ವಾಮಿ ದೀಪಾವಳಿ ಸಂದರ್ಭದಲ್ಲಿ ತಮ್ಮ ನಿವಾಸಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಂಗಳವಾರ ಅವರ ವಿರುದ್ಧ ಪ್ರಕರಣ ದಾಖಲಿಸಿದೆ. ಬೆಸ್ಕಾಂನ ಜಾಗೃತ ದಳ ವಿಭಾಗ ಜಯನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ವಿದ್ಯುತ್ ಕಾಯಿದೆಯ (ವಿದ್ಯುತ್ ಕಳ್ಳತನ) ಸೆಕ್ಷನ್ 135ರ ಅಡಿಯಲ್ಲಿ ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿದೆ.
“ವಿಶ್ವದ ಏಕೈಕ ಪ್ರಾಮಾಣಿಕ ವ್ಯಕ್ತಿ ಎಚ್.ಡಿ. ಕುಮಾರಸ್ವಾಮಿ ಅವರ ಜೆಪಿ ನಗರದ ನಿವಾಸವನ್ನು ವಿದ್ಯುತ್ ಕಂಬದಿಂದ ನೇರವಾಗಿ ಅಕ್ರಮ ವಿದ್ಯುತ್ ಸಂಪರ್ಕ ಪಡೆದು ಅಲಂಕಾರಿಕ ದೀಪಗಳನ್ನು ಬೆಳಗಿಸಲಾಗಿದೆ. ಮಾಜಿ ಸಿಎಂಗೆ ವಿದ್ಯುತ್ ಕದಿಯುವ ಬಡತನ ಬಡಿದಿರುವುದು ದುರಂತ” ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಕ್ರಮ ಎದುರಿಸಲು ಸಿದ್ಧ
ಕಾಂಗ್ರೆಸ್ ಟೀಕೆಗೆ ಪ್ರತಿಕ್ರಿಯೆ ನೀಡಿದ್ದ ಕುಮಾರಸ್ವಾಮಿ ದಂಡ ಕಟ್ಟಲು ಸಿದ್ಧ ಎಂದು ಹೇಳಿದ್ದರು. ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್‌ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು.

ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕರ್ನಾಟಕ ಕಾಂಗ್ರೆಸ್ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಮನೆಯಲ್ಲೇ ಇದ್ದೇನೆ, ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದರು.
ವಿದ್ಯುತ್ ಕಾಯಿದೆ 135 ಪ್ರಕಾರ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆಯುವುದು, ಎಲೆಕ್ಟ್ರಿಕ್ ಲೈನ್‌ಗಳು ಮತ್ತು ಸಾಮಗ್ರಿಗಳ ಕಳ್ಳತನ ಮಾಡುವುದು ಗಂಭೀರವಾದ ಅಪರಾಧವಾಗಿದ್ದು, ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸುವ ಅವಕಾಶವಿದೆ.































