ಅಪಘಾತವನ್ನು ಕೊಲೆಯತ್ನ ಎಂದು ಖರ್ಗೆ ವಿರುದ್ಧ ಆರೋಪ ಹೊರಿಸಿದ್ದ ರಾಠೋಡ್
ಕಲಬುರಗಿ : ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯ ಬದ್ಧ ರಾಜಕೀಯ ಎದುರಾಳಿ ಬಿಜೆಪಿಯ ಯುವ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅಪಘಾತದಲ್ಲಿ ಆಗಿದ್ದ ಗಾಯವನ್ನು ಹಲ್ಲೆ ಎಂದು ಕಥೆ ಕಟ್ಟಿದ್ದ ಆರೊಪದಲ್ಲಿ ಪೊಲೀಸರು ಮಣಿಕಂಠ ರಾಠೋಡ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಕಲಬುರಗಿ ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್ನಲ್ಲಿದ್ದ ಮಣಿಕಂಠ್ ರಾಠೋಡ್ ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲ ದಿನಗಳ ಹಿಂದೆ ಖರ್ಗೆಯ ಬೆಂಬಲಿಗರು ತನ್ನನ್ನು ಸಾಯಸಲು ಯತ್ನಿಸಿದ್ದಾರೆ ಎಂದು ಹೇಳಿ ರಾಠೋಡ್ ಆಸ್ಪತ್ರೆಗೆ ದಾಖಲಾಗಿದ್ದರು. ರಾಠೋಡ್ ಅಪಘಾತವನ್ನು ಕೊಲೆ ಯತ್ನ ಎಂದು ಬಿಂಬಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇದರ ಬೆನ್ನಲ್ಲೇ ಇಂದು ಮಣಿಕಂಠ ರಾಠೋಡ್ ಸುದ್ದಿಗೋಷ್ಠಿ ಕರೆದಿದ್ದರು. ಆದರೆ ಪೊಲೀಸರು ಸುದ್ದಿಗೋಷ್ಠಿ ನಡೆಸುವ ಮುನ್ನವೇ ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ.
ಕಾರು ಅಪಘಾತವನ್ನೇ ಹಲ್ಲೆ ಮಾಡಿದ್ದಾರೆಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪಿಸಿದ್ದರು. ಹಲ್ಲೆ ಪ್ರಕರಣ ಸಂಬಂಧ ಮಣಿಕಂಠ ರಾಠೋಡ್ ಬೆಂಬಲಿಗನನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ ನಾಟಕ ಬಯಲಾಗಿದೆ. ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ. ಕಾರು ಅಪಘಾತದಲ್ಲಿ ಗಾಯಗೊಂಡು ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದರು ಎನ್ನುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಟಿಕೇಟಿನಲ್ಲಿ ನಿಂತಿದ್ದ ರಾಠೋಡ್ ಕಠಿಣ ಸ್ಪರ್ಧೆ ನೀಡಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೇ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು.































































