ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು – ಸಿಎಂ ಸಿದ್ದರಾಮಯ್ಯ
ಬೆಳಗಾವಿ : ಪ್ರೀತಿಸುತ್ತಿದ್ದ ಯುವಕನೊಂದಿಗೆ ಯುವತಿ ಪರಾರಿಯಾಗಿದ್ದರಿಂದ ಯುವತಿಯ ಕುಟುಂಬಸ್ಥರು, ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ, ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಬೆಳಗಾವಿ ತಾಲೂಕಿನ ಹೊಸವಂಟಮುರಿ ಗ್ರಾಮದಲ್ಲಿ ನಡೆದಿದೆ.
ಹಲ್ಲೆಗೊಳಗಾದ ಮಹಿಳೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಗ್ರಾಮದ ಮಾಜಿ ಅಧ್ಯಕ್ಷ ಸೇರಿದಂತೆ ಒಟ್ಟು ಏಳು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಹೊಸವಂಟಮುರಿಯದಲ್ಲಿರುವ ಎರಡೂ ಕುಟುಂಬಗಳು ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ಯುವಕ-ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಯುವತಿಯ ಮನೆಯವರಿಗೆ ವಿಷಯ ತಿಳಿದು, ಕೆಲ ದಿನಗಳ ಹಿಂದೆ ಯುವಕನಿಗೆ ಎಚ್ಚರಿಕೆ ಕೊಟ್ಟಿದ್ದರು. ಅಲ್ಲದೇ, ಡಿಸೆಂಬರ್ 11ರಂದು ಸೋಮವಾರ ಮತ್ತೋರ್ವ ಯುವಕನೊಂದಿಗೆ ಯುವತಿಯ ನಿಶ್ಚಿತಾರ್ಥ ನಿಗದಿಪಡಿಸಲಾಗಿತ್ತು. ಆದರೆ, ತಡರಾತ್ರಿ ಯುವತಿ ಯುವಕನೊಂದಿಗೆ ಪರಾರಿಯಾಗಿದ್ದಾಳೆ.
ಇದರಿಂದಾಗಿ ಯುವಕನ ಮನೆಗೆ ನುಗ್ಗಿದ ಯುವತಿ ಪಾಲಕರು, ಯುವಕನ ತಾಯಿಯನ್ನು ಥಳಿಸಿದ್ದಾರೆ. ಮನೆಯ ವಸ್ತುಗಳನ್ನು ಧ್ವಂಸಗೊಳಿಸಿದ್ದು, ಊರಿನಲ್ಲಿನ ಕಂಬಕ್ಕೆ ಕಟ್ಟಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಹಾಗೂ ಡಿಸಿಪಿ ರೋಹನ್ ಜಗದೀಶ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು – ಸಿದ್ದರಾಮಯ್ಯ
ಪ್ರಕರಣಕ್ಕೆ ಸಂಬಂಧಿಸಿದ್ದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ, ಕುಟುಂಬಕ್ಕೆ ನ್ಯಾಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. “ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ಇದರಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಫೋಸ್ಟ್ ಮಾಡಿದ್ದಾರೆ.


































