ಜಮ್ಮು-ಕಾಶ್ಮೀರದಲ್ಲಿ ಕಟ್ಟೆಚ್ಚರ
ಹೊಸದಿಲ್ಲಿ : ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ತೀರ್ಮಾನದ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಲಿದ್ದು, ಕಣಿವೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
2019ರಲ್ಲಿ ಕೇಂದ್ರ ಸರಕಾರ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಮಾಡಿದೆ. ಸರಕಾರದ ಈ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು.
ಹಲವು ಸುತ್ತಿನ ವಾದ-ಪ್ರತಿವಾದಗಳ ನಂತರ ಇಂದು (ಡಿ. 11) ಸುಪ್ರೀಂ ಕೋರ್ಟ್ ಈ ಅರ್ಜಿಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಿದೆ. ಈ ಹಿನ್ನೆಲೆ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಇಂದು ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಒಂದು ವೇಳೆ ಸುಪ್ರೀಂ ಕೋರ್ಟ್ ತೀರ್ಪು ನಮ್ಮ ವಿರುದ್ಧವಾಗಿ ಬಂದರೆ ಸಂವಿಧಾನದ ಚೌಕಟ್ಟಿನೊಳಗೆ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪಿಸಲು ಶಾಂತಿಯುತವಾಗಿ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಉಮರ್ ಅಬ್ದುಲ್ಲ ಹೇಳಿದ್ದಾರೆ.
ಸಂವಿಧಾನ ವಿಧಿ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ 23 ಅರ್ಜಿಗಳು ಸಲ್ಲಿಕೆಯಾಗಿದ್ದವು. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಈ ಅರ್ಜಿಗಳ ವಾದ ಆಲಿಸಿದ ನಂತರ ತೀರ್ಪನ್ನು ಕಳೆದ ಸೆಪ್ಟೆಂಬರ್ 5ರಂದು ಕಾಯ್ದಿರಿಸಿತ್ತು.































