ಜೈಪುರ : ಭಜನ್ ಲಾಲ್ ಶರ್ಮಾ ಮೊದಲ ಬಾರಿಗೆ ಶಾಸಕರಾಗಿ, ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ನಾಲ್ಕು ಬಾರಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಅವರು ಆರ್‌ಎಸ್‌ಎಸ್ ಮತ್ತು ಎಬಿವಿಪಿ ಜೊತೆ ಕಾರ್ಯನಿರ್ವಹಿಸಿದ್ದಾರೆ. ಸಂಘಟನೆಯಲ್ಲಿ ಅವರ ಪ್ರಮುಖ ಪಾತ್ರವನ್ನು ಪರಿಗಣಿಸಿ ಅವರಿಗೆ ಮುಖ್ಯಮಂತ್ರಿ ಹುದ್ದೆಯ ಬಹುದೊಡ್ಡ ಜವಾಬ್ದಾರಿ ನೀಡಲಾಗಿದೆ.
ರಾಜಸ್ಥಾನದಲ್ಲೂ ಎರಡು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ದಲಿತ ಸಮುದಾಯ ಪ್ರೇಮ್ ಚಂದ್ ಬೈರವಾ ಹಾಗೂ ರಜಪೂತ ಸಮುದಾಯದ ದಿಯಾ ಕುಮಾರಿ ಡಿಸಿಎಂ ಆಗಲಿದ್ದಾರೆ. ಇನ್ನು ಸ್ಪೀಕರ್ ಆಗಿ ವಾಸುದೇವ ದೇವನಾನಿ ಅವರನ್ನು ಆಯ್ಕೆ ಮಾಡಲಾಗಿದೆ.
ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ, ಎಲ್ಲಾ 199 ಸ್ಥಾನಗಳಿಗೆ ನವೆಂಬರ್ 25 ರಂದು ಚುನಾವಣೆ ನಡೆಯಿತು. ಅದರ ಫಲಿತಾಂಶಗಳು ಡಿಸೆಂಬರ್ 3 ರಂದು ಬಂದಿತ್ತು. ರಾಜಸ್ಥಾನ ವಿಧಾನಸಭಾ ಚುನಾವಣೆಯ ರಾಜಕೀಯ ಕದನದಲ್ಲಿ ಕಾಂಗ್ರೆಸ್ ಅನ್ನು ಸೋಲಿಸುವ ಮೂಲಕ ಬಿಜೆಪಿ 115 ಸ್ಥಾನಗಳನ್ನು ಗೆದ್ದಿದೆ.
































