ಇಂದು ಆರೋಗ್ಯ ಇಲಾಖೆಯಿಂದ ಮಹತ್ವದ ಮಾರ್ಗಸೂಚಿ ಬಿಡುಗಡೆ
ಮಡಿಕೇರಿ : 60 ವರ್ಷ ತುಂಬಿದವರು, ಹೃದಯ ಸಂಬಂಧಿ ಸಮಸ್ಯೆ, ಕೋವಿಡ್ ಲಕ್ಷಣ ಹೊಂದಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೋವಿಡ್ ಪರೀಕ್ಷೆ ಹೆಚ್ಚಿಸಲಾಗುವುದು, ಉಸಿರಾಟದ ತೊಂದರೆ ಹಾಗೂ ಕೋವಿಡ್ ಲಕ್ಷಣ ಹೊಂದಿರುವವರಿಗೆ ಪರೀಕ್ಷೆ ಕಡ್ಡಾಯಗೊಳಿಸಲಾಗುವುದು. ಅನಗತ್ಯ ಆತಂಕ ಬೇಡ. ಎಲ್ಲರಿಗೂ ಮಾಸ್ಕ್ ಕಡ್ಡಾಯ ಹಾಗೂ ಜನರ ಓಡಾಟದ ಮೇಲೆ ನಿರ್ಬಂಧ ಹೇರುವಂತಹ ಸ್ಥಿತಿ ಇಲ್ಲ ಎಂದಿದ್ದಾರೆ.
ಕೋವಿಡ್-19 ಸಮಸ್ಯೆಗೆ ಸಂಬಂಧಿಸಿದಂತೆ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ನೀಡಲಿದೆ. ಕೊರೊನಾ ವೈರಸ್ ಮ್ಯುಟೇಶನ್ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೂ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಅಗತ್ಯವಿರುವ ಹಾಸಿಗೆ, ಪಿಪಿಇ ಕಿಟ್ ಮತ್ತು ಆಮ್ಲಜನಕವನ್ನು ಸಿದ್ಧವಾಗಿಟ್ಟುಕೊಳ್ಳಲು ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಶೀತ, ಜ್ವರ ಮತ್ತು ಕೆಮ್ಮು ಇರುವವರು ಕೋವಿಡ್-19 ಪರೀಕ್ಷೆಗೆ ಒಳಗಾಗುವಂತೆ ಎಚ್ಚರಿಕೆ ನೀಡಲಾಗಿದೆ. ‘ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾದರೆ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.






































































