ಸತ್ತು ನಾಲ್ಕು ವರ್ಷವಾಗಿರುವ ಅನುಮಾನ
ಚಿತ್ರದುರ್ಗ: ಚಿತ್ರದುರ್ಗದ ಚಳ್ಳಕೆರೆ ಗೇಟ್ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿವೆ. ಈ ಸಂಬಂಧ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಚಿತ್ರದುರ್ಗದ ದೊಡ್ಡ ಸಿದ್ದವ್ವನ ಹಳ್ಳಿಯ ಜಗನ್ನಾಥ್ ರೆಡ್ಡಿ ಎಂಬವರಿಗೆ ಸೇರಿದ ಮನೆ ಇದಾಗಿದೆ. ಇವರು ಪಿಡಬ್ಲ್ಯುಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿದ್ದು ನಿವೃತ್ತರಾಗಿದ್ದರು. ಮನೆಯ ಮುಂದೆ ನಿವೃತ್ತ ಇಂಜಿನಿಯರ್ ಎಂಬ ಬೋರ್ಡ್ ಇದೆ. ಇವೆಲ್ಲವೂ ಒಂದೇ ಕುಟುಂಬಸ್ಥರ ಶವಗಳು ಎಂದು ಹೇಳಲಾಗುತ್ತಿದ್ದು, ಸುಮಾರು 4 ವರ್ಷಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಇದೀಗ ಶಂಕಿಸಲಾಗಿದೆ. ಜಗನ್ನಾಥ ರೆಡ್ಡಿ, ಪತ್ನಿ ಪ್ರೇಮಾ ಹಾಗೂ ಮಗಳು ಮೃತಪಟ್ಟಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಜಗನ್ನಾಥ ರೆಡ್ಡಿಗೆ ಮೂವರು ಪುತ್ರರು ಹಾಗೂ ಒಬ್ಬರು ಓರ್ವ ಪುತ್ರಿ ಇದ್ದರು. ಜಗನ್ನಾಥ ರೆಡ್ಡಿಯವರ ಪತ್ನಿ ಅಸ್ವಸ್ಥರಾಗಿದ್ದು , 2 ಕೋಟಿ ಖರ್ಚು ಮಾಡಿ ಚಿಕಿತ್ಸೆ ಕೊಡಿಸಿದ್ದರೂ ಫಲಕಾರಿಯಾಗಿರಲಿಲ್ಲ. ಈ ಮನೆಯವರು ಯಾರನ್ನೂ ಒಳಬಿಟ್ಟುಕೊಳ್ಳುತ್ತಿರಲಿಲ್ಲ. ಬಾಗಿಲು ತೆರೆಯದೇ ಕಿಟಕಿಯಿಂದ ಮಾತಾಡಿಸಿ ಕಳುಹಿಸುತ್ತಿದ್ದರು. ಕೆಲವು ವರ್ಷಗಳಿಂದ ಯಾರ ಕಣ್ಣಿಗೂ ಬಿದ್ದಿರಲಿಲ್ಲ. ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಮನೆಯಲ್ಲಿ ಆಕ್ಸಿಜನ್ ಸಿಲಿಂಡರ್ ಕೂಡ ಕಂಡು ಬಂದಿದೆ. ಸಾವಿಗೆ ಆತ್ಮಹತ್ಯೆ ಕಾರಣವೇ? ಸಾವಿಗೆ ಕಾಯಿಲೆ ಅಥವಾ ಅನ್ಯ ಕಾರಣಗಳಿದ್ದಿರಬಹುದೇ? ನಾಲ್ಕಾರು ವರ್ಷಗಳಾದರೂ ಈ ಸಾವುಗಳು ಯಾರ ಗಮನಕ್ಕೂ ಬರದೇ ಇದ್ದುದು ಹೇಗೆ? ಎಂಬ ಪ್ರಶ್ನೆಗಳು ಮೂಡತೊಡಗಿದ್ದು, ಈ ಕುರಿತು ಇದೀಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.






























































