ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಭಾಗವಹಿಸುವುದಿಲ್ಲ ಎಂದು ಮಾಹಿತಿ
ಉಡುಪಿ: ಉಡುಪಿ ಪರ್ಯಾಯಕ್ಕೆ 10 ಕೋ. ರೂ. ಅನುದಾನ ನೀಡಲು ಸರಕಾರ ಕ್ರಮ ವಹಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಇಡೀ ಜಗತ್ತೇ ಗಮನಿಸುವ ಪರ್ಯಾಯ ಮಹೋತ್ಸವಕ್ಕೆ ಸರಕಾರ ಚಿಕ್ಕಾಸು ನೆರವು ನೀಡಿಲ್ಲ ಎಂಬ ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿನ್ನೆ ಉಡುಪಿಗೆ ಆಗಮಿಸಿದ್ದ ಉಸ್ತುವಾರಿ ಸಚಿವೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಪರ್ಯಾಯಕ್ಕೆ 10 ಕೋ. ರೂ. ಬಿಡುಗಡೆ ಮಾಡಲು ಕ್ರಮ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.
ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರದ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.
ಶ್ರೀಮಠದ ಪರ್ಯಾಯಕ್ಕೆ ಮುಖ್ಯಮಂತ್ರಿಯವರು 10 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕ್ರಮ ವಹಿಸಿದ್ದಾರೆ. ಇದೇ ಮೊದಲ ಬಾರಿಗೆ ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕುಟುಂಬ ಸಮೇತ ಪಾಲ್ಗೊಳ್ಳುತ್ತಿರುವೆ. ಪರ್ಯಾಯ ಮಹೋತ್ಸವಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ವಿವಿಧ ಕಾರಣಗಳಿಂದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.































































