ಇಂದು ಬಿಜೆಪಿ ಕಾರ್ಯಕಾರಿಣಿ ಸಮಿತಿ ಸಭೆ

ಬೆಂಗಳೂರು : ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿಕೊಳ್ಳುತ್ತಿರುವ ರಾಜ್ಯ ಬಿಜೆಪಿಯ ಇಂದು ಕಾರ್ಯಕಾರಿಣಿ ಸಮಿತಿ ಸಭೆ ನಡೆಯಲಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದ ರಾಜ್ಯ ಪದಾಧಿಕಾರಿಗಳ ತಂಡ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿಯ ಕಾರ್ಯಕಾರಿಣಿ ಸಭೆ ಇದಾಗಲಿದೆ.

ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುವ ಕಾರ್ಯಕಾರಿಣಿ ಸಭೆಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸಲಿದ್ದಾರೆಂದು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಹೇಳಿದ್ದಾರೆ.
ಶುಕ್ರವಾರ ಕಾರ್ಯಾಕಾರಿಣಿ ನಡೆಯುವ ಸ್ಥಳದಲ್ಲಿನ ಸಿದ್ಧತೆಗಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಚಟುವಟಿಕೆ ಜೊತೆಗೆ ನಮ್ಮ ಮುಂದಿನ ಕಾರ್ಯ ಯೋಜನೆ ಕುರಿತು ಸಭಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಿದರು.

ರಾಜ್ಯದಲ್ಲಿರುವ ಬಡವರು, ರೈತರು ಮತ್ತು ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಗಳನ್ನು ಕೈಗೆತ್ತಿಕೊಳ್ಳಬೇಕು. ಬಡವರ ವಿರೋಧಿ ಸರ್ಕಾರದ ಬಗ್ಗೆ ಸತ್ಯಾಂಶಗಳನ್ನು ತಲುಪಿಸಬೇಕು ಎಂದು ಉದ್ದೇಶಿಸಿದ್ದೇವೆಂದು ತಿಳಿಸಿದರು.

ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದ ಕಾರ್ಯಕ್ರಮಗಳಿಂದ ದೇಶಾದ್ಯಂತ ಜನತೆ ಮೋದಿಜೀ ಪರವಾಗಿದ್ದಾರೆ. ಕೇಂದ್ರದ ಯೋಜನೆಗಳನ್ನು ಮನೆಮನೆಗೆ ತಲುಪಿಸಲು ಉದ್ದೇಶಿಸಲಾಗಿದೆ. ಮೋದಿ ಅವರ ಜನಪ್ರಿಯತೆಯನ್ನು ಮತವನ್ನಾಗಿ ಪರಿವರ್ತಿಸಿ ಬಿಜೆಪಿಗೆ ಕರ್ನಾಟಕವು ದಕ್ಷಿಣ ಭಾರತದ ಹೆಬ್ಬಾಗಿಲು ಎಂದು ಸಾಬೀತು ಪಡಿಸುತ್ತೇವೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತೇವೆ ಎಂದರು.

ಕೇಂದ್ರ ಸಚಿವ ಭೂಪೇಂದ್ರ ಯಾದವ್ ಜೀ ಅವರು ನಾಳೆ ಕಾರ್ಯಕಾರಿಣಿ ಉದ್ಘಾಟಿಸುತ್ತಾರೆ. ಪಕ್ಷದ ಎಲ್ಲಾ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳು ವೇದಿಕೆ ಮೇಲೆ ಇರುತ್ತಾರೆ. ಅವರ ಮಾರ್ಗದರ್ಶನದಲ್ಲಿ ಪಕ್ಷ ಮುನ್ನಡೆಸುವ ಕುರಿತು ಚರ್ಚಿಸುತ್ತೇವೆ. 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಇದೆ. ರಾಜ್ಯದಾದ್ಯಂತ ನರೇಂದ್ರ ಮೋದಿಜೀ ಅವರ ಪರವಾದ ಅಲೆ ಇದೆ. ಹಾಗಾಗಿ ಈ ವಿಚಾರದಲ್ಲಿ ನನಗೆ ವಿಶ್ವಾಸ ಇದೆ. ಮೋದಿಜೀ ಅವರ ನಾಯಕತ್ವ ಮತ್ತು ಬಿಜೆಪಿ ತತ್ವ, ಸಿದ್ಧಾಂತ ಒಪ್ಪಿ ಬರುವ ಯಾವುದೇ ನಾಯಕರನ್ನು ಪಕ್ಷಕ್ಕೆ ಸ್ವಾಗತ ಮಾಡುತ್ತೇವೆ ಎಂದರು.





























































































































error: Content is protected !!
Scroll to Top