ದೇಶದಾದ್ಯಂತ ಮುಂದಿನ 7 ದಿನಗಳಲ್ಲಿ ಸಿಎಎ ಜಾರಿ – ಕೇಂದ್ರ ಸಚಿವರ ಘೋಷಣೆ

ಕೊಲ್ಕತ್ತಾ : ಮುಂದಿನ 7ದಿನಗಳಲ್ಲಿ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಘೋಷಿಸಿದ್ದಾರೆ.
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಕಾಕದ್ವೀಪ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ 7 ದಿನಗಳಲ್ಲಿ ಸಿಎಎ ಕಾಯ್ದೆಯನ್ನು ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಜಾರಿಗೆ ತರಲಾಗುವುದು ಎಂದು ನಾನು ವೇದಿಕೆಯಿಂದ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ‘ದೇಶದ ಕಾನೂನು’ ಎಂದು ಬಣ್ಣಿಸಿದ್ದರು. ಅಲ್ಲದೇ ಅದರ ಅನುಷ್ಠಾನವನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಜೊತೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಿಎಎ ಬಗ್ಗೆ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಅದರ ಬೆನ್ನಲ್ಲೇ ಕೇಂದ್ರ ಸಚಿವ ನೀಡಿರುವ ಈ ಹೇಳಿಕೆ ಭಾರೀ ಸಂಚಲನವನ್ನು ಸೃಷ್ಟಿಸಿದೆ.

ಈ ಕಾನೂನಿನ ಅಡಿಯಲ್ಲಿ, 31 ಡಿಸೆಂಬರ್ 2014 ರವರೆಗೆ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವವನ್ನು ನೀಡಲಾಗುತ್ತದೆ. ಡಿಸೆಂಬರ್ 2019 ರಲ್ಲಿ ಸಿಎಎ ಅನ್ನು ಸಂಸತ್ತು ಅಂಗೀಕರಿಸಿದ ನಂತರ ಮತ್ತು ರಾಷ್ಟ್ರಪತಿಗಳು ಸಹಿ ಹಾಕಿದ ನಂತರ, ದೇಶದ ಅನೇಕ ಭಾಗಗಳಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆದವು.





























































































































error: Content is protected !!
Scroll to Top