ಸಾಣೂರಿನಲ್ಲಿ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಬೇಡಿಕೆ

ಕಾರ್ಕಳ : ರಾಷ್ಟ್ರೀಯ ಹೆದ್ದಾರಿ-169 ಸಾಣೂರು ಗ್ರಾಮದ ಪುಲ್ಕೇರಿ ಬೈಪಾಸ್ ಸರ್ಕಲ್‌ನಿಂದ ಮಂಗಳೂರಿನ ಬಿಕರ್ನಕಟ್ಟೆಯವರೆಗೆ 45 ಕಿ.ಮೀ ಉದ್ದದ ರಸ್ತೆ ನಿರ್ಮಾಣ ಕಾಮಗಾರಿ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದು, ಈಗಾಗಲೇ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮುಕ್ತಾಯದ ಹಂತದಲ್ಲಿದೆ. ಆದರೆ, ಪುಲ್ಕೇರಿ ಬೈಪಾಸ್ ಸರ್ಕಲ್‌ನಿಂದ ಸಾಣೂರಿನ ಮುಖ್ಯಪೇಟೆಯಲ್ಲಿ ಸರ್ವಿಸ್ ರಸ್ತೆ ನಿರ್ಮಾಣವಾಗಿಲ್ಲ. ಸರ್ವಿಸ್ ರಸ್ತೆ ನಿರ್ಮಾಣ ಮಾಡದಿದ್ದರೆ ತೀವ್ರ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಸಾಣೂರು ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಸಾಣೂರು ನರಸಿಂಹ ಕಾಮತ್ ಆತಂಕ ವ್ಯಕ್ತಪಡಿಸಿದ್ದಾರೆ.

ಸಾಣೂರು ಯುವಕ ಮಂಡಲದ ಎದುರಿನಿಂದ ಮುರತ್ತಂಗಡಿಯ ಸಾಣೂರು ಪದವಿ ಪೂರ್ವ ಕಾಲೇಜಿನವರೆಗೆ ಸುಮಾರು 2 ಕಿ. ಮೀ. ಉದ್ದಕ್ಕೆ ಎರಡು ಬದಿಗಳಲ್ಲಿ ಸರ್ವಿಸ್ ರಸ್ತೆ ನಿರ್ಮಾಣವಾಗಿರುತ್ತದೆ. ಪುಲ್ಕೇರಿ ಬೈಪಾಸ್ ಸರ್ಕಲ್‌ನಿಂದ ಸಾಣೂರಿನ ಮುಖ್ಯಪೇಟೆಯಲ್ಲಿ ಸರ್ವಿಸ್ ರಸ್ತೆ ನಿರ್ಮಾಣವಾಗದೆ, ರಾಷ್ಟ್ರೀಯ ಹೆದ್ದಾರಿಯ ಮುಖ್ಯರಸ್ತೆಯ ಕೆಲಸ ಕಾರ್ಯಗಳು ಮಾತ್ರ ಭರದಿಂದ ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಅಧಿಕಾರಿಗಳ ಭರವಸೆ
ಈ ಹಿಂದೆ ಶಾಸಕ ಸುನಿಲ್ ಕುಮಾರ್ ಅವರು ರಾಜ್ಯ ಸಚಿವರಾಗಿದ್ದಾಗ ಅಂದಿನ ಡಿಸಿ ಕೂರ್ಮ ರಾವ್ ಅವರ ಅಧ್ಯಕ್ಷತೆಯಲ್ಲಿ ಕಾರ್ಕಳದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ, ಭೂಸ್ವಾಧೀನಾಧಿಕಾರಿ, ಗುತ್ತಿಗೆದಾರರು ಮತ್ತು ಸಾಣೂರು ಗ್ರಾಮಸ್ಥರ ಸಭೆ ನಡೆಸಿ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 4.5 ಕಿಲೋಮೀಟರ್ ಎರಡು ಬದಿಗಳಲ್ಲಿ ಸರ್ವಿಸ್ ರಸ್ತೆ ನಿರ್ಮಾಣ ಮಾಡುವಂತೆ ಇಲಾಖೆಗೆ ಸೂಚಿಸಿದ್ದರು. ಅಲ್ಲದೆ ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಯೋಜನಾಧಿಕಾರಿ ಕಚೇರಿಗೆ ಪ್ರಸ್ತಾವನೆಯನ್ನು ಕೂಡ ಸಲ್ಲಿಸಿದ್ದರು.

ಕಳೆದ ಡಿ. 19 ರಂದು ಮತ್ತೊಮ್ಮೆ ಶಾಸಕ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸಭೆ ನಡೆದಾಗ, ಸಾಣೂರಿನ ಮುಖ್ಯಪೇಟೆಯಲ್ಲಿಯೇ ಸರ್ವಿಸ್ ರಸ್ತೆ ನಿರ್ಮಾಣ ಕಾರ್ಯ ಕೈಬಿಟ್ಟಿರುವ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಸರ್ವಿಸ್ ರಸ್ತೆ ಮಾಡದೆ ಇರುವ ಪ್ರದೇಶಗಳಲ್ಲಿ ಆಗಾಗ ಅಪಘಾತಗಳು ಸಂಭವಿಸುವುದು ಸರ್ವೇಸಾಮಾನ್ಯವಾಗಿದ್ದು, ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯ ಮಾಡುವಾಗ ಪ್ರಮುಖ ಸ್ಥಳಗಳಲ್ಲಿ ಸರ್ವಿಸ್ ರಸ್ತೆಯನ್ನು ಕಡ್ಡಾಯವಾಗಿ ಮಾಡುವ ಅವಶ್ಯಕತೆಯನ್ನು ಹೆದ್ದಾರಿ ಇಲಾಖೆಗೆ ಸೂಚಿಸಿದ್ದರು. ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಈ ಬಗ್ಗೆ ಕೇಂದ್ರ ಸರಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದ್ದರು.

ಸಭೆಯಲ್ಲಿ ಗ್ರಾಮಸ್ಥರಿಂದ ಆಕ್ರೋಶ
ರಾಷ್ಟ್ರೀಯ ಹೆದ್ದಾರಿ ಯೋಜನಾಧಿಕಾರಿಯವರು ಸರ್ವಿಸ್ ರಸ್ತೆ ನಿರ್ಮಾಣ ಕಾರ್ಯಕ್ಕೆ ಅನುದಾನದ ಕೊರತೆಯಿದ್ದು, ಈಗಾಗಲೇ ಪರಿಹಾರ ವಿತರಣೆಯಲ್ಲಿ ಅಂದಾಜಿಗಿಂತ ಹೆಚ್ಚು ಹಣ ಪಾವತಿ ಮಾಡಬೇಕಾಗಿದ್ದು, ಒಟ್ಟು ಯೋಜನಾ ವೆಚ್ಚ ಭಾರಿ ಏರಿಕೆಯಾಗಿದ್ದು ಸರ್ವಿಸ್ ರಸ್ತೆ ನಿರ್ಮಾಣ ಕಾರ್ಯವನ್ನು ಕೈ ಬಿಡಲಾಗಿದೆ ಎಂದು ತಿಳಿಸಿದರು. ಈ ಬಗ್ಗೆ ಸಭೆಯಲ್ಲಿ ಭಾಗವಹಿಸಿದ್ದ ಸಾಣೂರು ಗ್ರಾಮಸ್ಥರು ತೀವ್ರ ಆಕ್ಷೇಪ ಆಕ್ರೋಶ ವ್ಯಕ್ತಪಡಿಸಿದಾಗ ಮಧ್ಯಪ್ರವೇಶಿಸಿದ ಶಾಸಕ ಸುನಿಲ್ ಕುಮಾರ್ ಅವರು, ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಎರಡು ವರ್ಷದ ಹಿಂದೆಯೇ ಪ್ರಸ್ತಾವನೆ ಸಲ್ಲಿಸಿದ್ದರೂ, ಹೆದ್ದಾರಿ ಇಲಾಖೆಯ ನಿರ್ಲಕ್ಷದ ಬಗ್ಗೆ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿ ಈ ಬಗ್ಗೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರ ಗಮನ ಸೆಳೆಯುವುದಾಗಿ ಭರವಸೆ ನೀಡಿದ್ದರು.

ಶಾಶ್ವತವಾಗಿ ನಿಲುಗಡೆಯಾಗುವ ಅಪಾಯ
ಇದೀಗ ಇನ್ನು ಒಂದು ತಿಂಗಳಲ್ಲಿ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳು ಮುಗಿಯುವ ಹಂತದಲ್ಲಿದ್ದು, ಯಾವುದೇ ಸಂದರ್ಭದಲ್ಲಿ ಗುತ್ತಿಗೆದಾರರು ಈ ಭಾಗದ ಕೆಲಸ ಕಾರ್ಯಗಳನ್ನು ಮುಗಿಸಿ ಇನ್ನೊಂದು ಕಡೆಗೆ ಹೋಗುವ ಸಾಧ್ಯತೆ ಇದೆ. ಅಷ್ಟರೊಳಗೆ ಸರ್ವಿಸ್ ರೋಡ್ ಬಿಟ್ಟು ಹೋಗಿರುವ ಕಡೆ, ಹೊಸ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿ ಹಣ ಬಿಡುಗಡೆಯಾಗದಿದ್ದರೆ ಸರ್ವಿಸ್ ರೋಡ್ ನಿರ್ಮಾಣ ಕಾರ್ಯ ಸದ್ಯಕ್ಕೆ ಶಾಶ್ವತವಾಗಿ ನಿಲುಗಡೆಯಾಗುವ ಅಪಾಯವಿದೆ ಎಂದು ನರಸಿಂಹ ಕಾಮತ್ ಆತಂಕ ವ್ಯಕ್ತಪಡಿಸಿದ್ದಾರೆ.

ಸಾಣೂರು ಗ್ರಾಮಸ್ಥರ ನಿರಂತರ ಮನವಿ, ಹಕ್ಕೋತ್ತಾಯವನ್ನು ಕಡೆಗಣಿಸಿ, ರಾಷ್ಟ್ರೀಯ ಹೆದ್ದಾರಿ ಇಲಾಖೆ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ಕೇಂದ್ರ ಸಾರಿಗೆ ಸಚಿವಾಲಯಕ್ಕೆ ಪ್ರಸ್ತಾವನೆ ಹಾಗೂ ಒತ್ತಡ ತಂದು ಸರ್ವಿಸ್ ರೋಡ್ ರಸ್ತೆ ನಿರ್ಮಾಣ ಮಾಡದಿದ್ದರೆ, ಸಾಣೂರು ಗ್ರಾಮಸ್ಥರೆಲ್ಲರೂ ಒಟ್ಟಾಗಿ ತೀವ್ರ ಪ್ರತಿಭಟನೆ, ಹೆದ್ದಾರಿ ತಡೆ, ಮುಂತಾದ ಅನಿವಾರ್ಯ ಕ್ರಮಕ್ಕೆ ಮುಂದಾಗಬೇಕಾಗಿದಿತೆಂದು ಅವರು ಎಚ್ಚರಿಕೆ ನೀಡಿದ್ದಾರೆ.





























































































































error: Content is protected !!
Scroll to Top