ದೇಶ ವಿಭಜಿಸುವವರಿಗೆ ಗುಂಡಿಕ್ಕುವ ಕಾನೂನು ತರಬೇಕೆಂಬ ಹೇಳಿಕೆ
ಬೆಂಗಳೂರು: ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಕೆ. ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.
ದಾವಣಗೆರೆಯ ನಿಜಲಿಂಗಪ್ಪ ಬಡಾವಣೆಯ ಕಾಂಗ್ರೆಸ್ ಮುಖಂಡ ಹನುಮಂತ ಎಂಬುವರು ನೀಡಿದ ದೂರನ್ನು ಆಧರಿಸಿ ಇಲ್ಲಿನ ಬಡಾವಣೆ ಠಾಣೆಯಲ್ಲಿ ಐಪಿಸಿ ಸೆಕ್ಷನ್ 505 (1) (ಸಿ), 505 (2) ಮತ್ತು 506 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಗುರುವಾರ ನಡೆದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಈಶ್ವರಪ್ಪ ನೀಡಿರುವ ಹೇಳಿಕೆ ಜನ, ಸಮುದಾಯ, ಗುಂಪುಗಳ ನಡುವೆ ದ್ವೇಷ ಭಾವನೆ ಉಂಟುಮಾಡುತ್ತದೆ. ಗಲಭೆಗಳು ಆಗಬಹುದೆಂದು ಗೊತ್ತಿದ್ದರೂ ಪ್ರಚೋದನಾಕಾರಿ ಹೇಳಿಕೆ ನೀಡಿದ್ದು, ಜನರ ಮಧ್ಯೆ ಗಲಭೆಗಳಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹನುಮಂತ ದೂರು ನೀಡಿದ್ದಾರೆ.
ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆಂಬ ಈಶ್ವರಪ್ಪ ಅವರ ಹೇಳಿಕೆಗೆ ಕಾಂಗ್ರೆಸ್ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಮಹಾತ್ಮ ಗಾಂಧಿಯವರಿಗೆ ಗುಂಡಿಕ್ಕಿದ ಗೋಡ್ಸೆ ಸಂತತಿಯವರಾದ ಬಿಜೆಪಿ ನಾಯಕರ ಭಯೋತ್ಪಾದಕ ಮನಸ್ಥಿತಿ ಅನಾವರಣವಾಗಿದೆ ಎಂದು ಹೇಳಿದೆ.
ಸಂಸದರಾದ ಡಿ. ಕೆ ಸುರೇಶ್ ಹಾಗೂ ಶಾಸಕರಾದ ವಿನಯ್ ಕುಲಕರ್ಣಿಯವರನ್ನು ಗುಂಡಿಕ್ಕಿ ಕೊಲ್ಲಬೇಕು ಎನ್ನುವ ಮೂಲಕ ಬಿಜೆಪಿಯ ಈಶ್ವರಪ್ಪ ಭಯೋತ್ಪಾದನೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ್ದಾರೆ. ಈ “ಗುಂಡು“ ಹಾಕುವ ವ್ಯಕ್ತಿಯ ಮೇಲೆ ಭಯೋತ್ಪಾದನೆ ನಿಗ್ರಹ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಗೃಹ ಸಚಿವರಲ್ಲಿ ಮನವಿ ಮಾಡುತ್ತೇವೆಂದು ತಿಳಿಸಿದೆ.






























































