15 ಸಾವಿರ ರೂ. ಪ್ರೋತ್ಸಾಹ ಧನ, ಕಾರ್ಮಿಕರೆಂದು ಪರಿಗಣಿಸಲು ಬೇಡಿಕೆ
ಬೆಂಗಳೂರು: ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಾವಿರಾರು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇಂದಿನಿಂದ ತೊಡಗಿ ಎರಡು ದಿನ ಬೆಂಗಳೂರಿನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲಿದ್ದಾರೆ. ಸರ್ಕಾರ ರಚನೆಗೂ ಮುನ್ನ ನೀಡಿದ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಎರಡು ದಿನಗಳ ಕಾಲ ಧರಣಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.ಇಂದು ಬೆಳಗ್ಗೆ 11 ಗಂಟೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಆರಂಭವಾಗಲಿದೆ. ರಾಜ್ಯದ ಮೂಲೆ ಮೂಲೆಯಿಂದ ಪ್ರತಿಭಟನಾಕಾರರು ಆಗಮಿಸಲಿದ್ದಾರೆ.
ಕಳೆದ ಎಂಟು ವರ್ಷಗಳಿಂದ ದುಡಿದಷ್ಟು ಪ್ರೋತ್ಸಾಹ ಧನ ಸಿಗದೆ ಆಗುತ್ತಿರುವ ವಂಚನೆ ತಡೆಗಟ್ಟಲು ಆಶಾ ಪೇಮೆಂಟ್ ಪ್ರಕ್ರಿಯೆಯಿಂದ ಆರ್ಸಿಎಚ್ ಪೋರ್ಟಲ್ ಅನ್ನು ಡೀಲಿಂಕ್ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 15,000 ರೂ. ಪ್ರೋತ್ಸಾಹ ಧನ ನೀಡಬೇಕು.
ಮೊಬೈಲ್ ಕೆಲಸಗಳನ್ನು ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಿ ಅಥವಾ ಮೊಬೈಲ್, ಡಾಟಾ ಒದಗಿಸಿ. ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹ ಧನ ನಿಗದಿ ಮಾಡಿ. ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲವೋ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿ ಎಂಬೆಲ್ಲ ಬೇಡಿಕೆಗಳನ್ನು ಆಶಾ ಕಾರ್ಯಕರ್ತೆಯರು ಮುಂದಿಟ್ಟಿದ್ದಾರೆ.
ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 2000 ರೂ.ನಷ್ಟು ಗೌರವಧನವನ್ನು ಹೆಚ್ಚಿಗೆ ಮಾಡಬೇಕು, ಕಳೆದ 2 ವರ್ಷದಿಂದ ನೀಡದಿರುವ ಸಮವಸ್ತ್ರಗಳನ್ನು ಒದಗಿಸಲು ಕೂಡಲೆ ಕ್ರಮ ಕೈಗೊಳ್ಳಬೇಕು, ಕಳೆದ 4 ವರ್ಷದಿಂದ ನೀಡದಿರುವ ಡೈರಿಯನ್ನು ನಿಗದಿತ ಸಮಯಕ್ಕೆ ಒದಗಿಸಬೇಕು, ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ ವೇತನ, ಗ್ರಾಚ್ಯುಟಿ, ಪಿಎಫ್, ಇಎಸ್ಐ ಸೌಲಭ್ಯ ನೀಡಬೇಕು ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರು ಒತ್ತಾಯಿಸುತ್ತಿದ್ದಾರೆ.































































