ಉಡುಪಿ ನನ್ನದೇ ಕ್ಷೇತ್ರ : ಶೋಭಾ ಕರಂದ್ಲಾಜೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರ ನನ್ನದ್ದೇ ಎನ್ನುವ ಮೂಲಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯಾವ ಕಾರಣಕ್ಕೂ ಕ್ಷೇತ್ರ ಬಿಟ್ಟುಕೊಡುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಂಸದೆ ಶೋಭಾ ಕರಂದ್ಲಾಜೆ ಕ್ಷೇತ್ರ ಬದಲಾವಣೆ ಹಾಗೂ ಉಡುಪಿ-ಚಿಕ್ಕಮಗಳೂರಿನಿಂದ ಬೇರೆಯವರಿಗೆ ಟಿಕೆಟ್‌ ಕೊಡುವ ಸಾಧ್ಯತೆಯನ್ನು ಅಲ್ಲಗಳೆದಿದ್ದಾರೆ.
ಹಲವು ಕ್ಷೇತ್ರಗಳಿಂದ ನನ್ನ ಹೆಸರು ಕೇಳಿ ಬರುತ್ತಿದೆ. ಕನಿಷ್ಠ 5-6 ಕ್ಷೇತ್ರಗಳು ನನ್ನ ಹೆಸರನ್ನು ಹೇಳುತ್ತಿವೆ. ಆದರೆ ಉಡುಪಿ-ಚಿಕ್ಕಮಗಳೂರು ನನ್ನ ಕ್ಷೇತ್ರ. ಈ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದರು. ನಾನು ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ. ಆದರೆ ಪಕ್ಷ ಬದಲಾವಣೆ ಬಯಸಿದಲ್ಲಿ ಅದನ್ನು ಪಾಲಿಸಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ನನ್ನ ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಪ್ರಚಾರಕ್ಕೆ ಹೋಗಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
ದಿಲ್ಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಆ ಪ್ರತಿಭಟನೆಗಳು ರಾಜಕೀಯ ಆಧಾರಿತವಾಗಿವೆ. ನಾವು 22 ಬೆಳೆಗಳಿಗೆ ಎಂಎಸ್‌ಪಿ ನೀಡುತ್ತಿದ್ದೇವೆ. ಆದರೂ ರೈತರು ದೆಹಲಿಗೆ ಬಂದಿದ್ದಾರೆ. ಚುನಾವಣೆ ಸಮೀಪಿಸುತ್ತಿರುವಂತೆಯೇ ಇದು ರೈತರ ಹೆಸರಿನಲ್ಲಿ ನಡೆಯುತ್ತಿರುವ ರಾಜಕೀಯ ಆಧಾರಿತ ಪ್ರತಿಭಟನೆಯಾಗಿದೆ. ಇದು ಕೆಲವು ಸಂಘಟನೆಗಳು ಮತ್ತು ಅಂತರಾಷ್ಟ್ರೀಯ ಚಳವಳಿಗಳ ಷಡ್ಯಂತ್ರದ ಭಾಗವಾಗಿದೆ. ಕೇಂದ್ರ ಸರ್ಕಾರ ಚರ್ಚೆಗೆ ಸಿದ್ಧವಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಸರ್ಕಾರಿ ನೌಕರರ ಸಂಬಳ ವಿಳಂಬವಾಗಿದೆ, ಎರಡು ತಿಂಗಳ ಹಿಂದೆ ನ್ಯಾಯಾಧೀಶರ ಸಂಬಳ ಎಂಟು ದಿನ ವಿಳಂಬವಾಗಿತ್ತು. ಇದು ಕರ್ನಾಟಕದ ಹಣೆಬರಹ ಎಂದು ಅವರು ವ್ಯಂಗ್ಯವಾಡಿದ್ದಾರೆ.



















































































error: Content is protected !!
Scroll to Top