ಸಿಎಂಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಹಾವಳಿ ವಿಪರೀತವಾಗಿದ್ದು, ಇದನ್ನು ನಿಯಂತ್ರಿಸಲು ಪ್ರತ್ಯೇಕ ಸ್ಕ್ವಾಡ್ ರಚನೆ ಮಾಡಬೇಕು ಹಾಗೂ ಜಿಲ್ಲೆಯ ಅಭಿವೃದ್ಧಿಗೆ 50 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಯಶ್ಪಾಲ್ ಸುವರ್ಣ, ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಯಲ್ಲಿ ಪ್ರತ್ಯೇಕ ದಳ ರಚಿಸುವಂತೆ ಮನವಿ ಮಾಡಿದರು.
ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಮಣಿಪಾಲ ಮತ್ತು ಉಡುಪಿ ಜಿಲ್ಲೆಯ ವಿವಿಧೆಡೆ ಮಾದಕ ವಸ್ತುಗಳ ಸೇವನೆಯಿಂದ ವಿದ್ಯಾರ್ಥಿಗಳು, ಯುವಕರು ದಾರಿ ತಪ್ಪುತ್ತಿದ್ದಾರೆ. ಆದ್ದರಿಂದ ಮಾದಕ ವಸ್ತು ಕಳ್ಳಸಾಗಣೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಪ್ರತ್ಯೇಕ ವಿಶೇಷ ಪಡೆ ರಚಿಸುವುದು ಅತ್ಯಗತ್ಯ ಎಂದು ಮನವಿ ಮಾಡಿದ್ದಾರೆ.






























































