ದೇವಸ್ಥಾನಗಳಿಗೆ ಶೇ. 10 ತೆರಿಗೆ ವಿಧಿಸುವ ಮಸೂದೆಗೆ ಮೇಲ್ಮನೆಯಲ್ಲಿ ಸೋಲು

ಬೆಂಗಳೂರು: ಪ್ರತಿಪಕ್ಷಗಳ ಭಾರಿ ವಿರೋಧದ ನಡುವೆ ವಿಧಾನ ಸಭೆಯಲ್ಲಿ ಅಂಗೀಕಾರಗೊಂಡಿದ್ದ ದೇವಸ್ಥಾನಗಳಿಂದ ಶೇ. 10 ತೆರಿಗೆ ಸಂಗ್ರಹಿಸುವ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಪರಿಷತ್​ನಲ್ಲಿ ಸೋಲಾಗಿದೆ. ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದ್ದು, ಪ್ರತಿಪಕ್ಷ ಬಿಜೆಪಿ ಜೈ ಶ್ರೀರಾಮ ಘೋಷಣೆ ಕೂಗಿ ಸಂಭ್ರಮಿಸಿದೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆಯನ್ನು ವಿಧಾನ ಪರಿಷತ್‌ನಲ್ಲಿ ಮಂಡಿಸಿ ಮಾತನಾಡಿದ ರಾಮಲಿಂಗಾರೆಡ್ಡಿ, 2003ರಿಂದ ವಿಧೇಯಕ ಜಾರಿಯಲ್ಲಿದೆ. 2003ರ ಮೇ 1ರಿಂದ ದೇವಸ್ಥಾನಗಳಿಂದ ನಿಧಿ ಸಂಗ್ರಹಿಸಲಾಗುತ್ತಿದೆ. ಈಗಿರುವ ನಿಯಮದಂತೆ ಸರ್ಕಾರಕ್ಕೆ 8 ಕೋಟಿ ರೂ. ಸಲ್ಲಿಕೆ ಆಗುತ್ತಿದೆ ಎಂದರು. ಈಗಿನ‌ ಸಾಮಾನ್ಯ ಸಂಗ್ರಹಣ ನಿಧಿಯಿಂದ ಧಾರ್ಮಿಕ ಕೆಲಸ ಮಾಡಲಾಗಲ್ಲ. ಹೊಸ ನಿಯಮದಿಂದ 60 ಕೋಟಿ ರೂಪಾಯಿ ಹಣ ಸಂಗ್ರಹ ಆಗುತ್ತದೆ. ಸಿ ದರ್ಜೆಯ ದೇಗುಲಗಳನ್ನು ನಿರ್ವಹಿಸಲು ಇದರಿಂದ ಸಾಧ್ಯವಾಗುತ್ತದೆ ಎಂದರು.

ವಿಧೇಯಕದಲ್ಲಿದ್ದ ತಿದ್ದುಪಡಿ ಅಂಶಗಳಿಗೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಒಂದು ಕೋಟಿಗಿಂತಲೂ ಹೆಚ್ಚು ಆದಾಯ ಇರುವ ದೇವಸ್ಥಾನಗಳ ಒಟ್ಟು ಆದಾಯದಿಂದ ಶೇಕಡ 10ರಷ್ಟು ನಿಧಿ ಸಂಗ್ರಹಣೆ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು.

ಪರ-ವಿರೋಧದ ಚರ್ಚೆಯ ಬಳಿಕ ಉಪ ಸಭಾಪತಿ ಪ್ರಾಣೇಶ್ ಅವರು ತಿದ್ದುಪಡಿ ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದರು. ವಿಧೇಯಕದ ಪರವಾಗಿ ಏಳು ಮತಗಳು ಚಲಾವಣೆಯಾದರೆ, ವಿಧೇಯಕದ ವಿರುದ್ಧವಾಗಿ 18 ಮತಗಳು ಚಲಾವಣೆಯಾದವು. ಇದರೊಂದಿಗೆ ಸರ್ಕಾರ ಮಂಡಿಸಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ಪರಿಷತ್‌ನಲ್ಲಿ ತಿರಸ್ಕೃತಗೊಂಡಿತು.

ಹಿಂದೂ ಧಾರ್ಮಿಕ ದತ್ತಿ ಮಸೂದೆ ತಿರಸ್ಕಾರಗೊಂಡ ನಂತರ ಪ್ರತಿಪಕ್ಷ ಬಿಜೆಪಿ ಸದಸ್ಯರು ಜೈ ಶ್ರೀರಾಮ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಸದಸ್ಯರು ಭಾರತ್ ಮಾತಾ ಕಿ ಜೈ ಹಾಗೂ ಜೈ ಭೀಮ್ ಎಂದು ಘೋಷಣೆ ಕೂಗಿದರು.





























































































































error: Content is protected !!
Scroll to Top