ಹೆಬ್ರಿ : ಅರಣ್ಯ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಹೊಂದಾಣಿಕೆ ಇಲ್ಲದೆ ದಿನನಿತ್ಯ ನೂರಾರು ವಾಹನಗಳು ಸಂಚರಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ತೊಡಕು ಮಾಡುತ್ತಿದ್ದಾರೆ. ಅಲ್ಲದೆ ಕಾನೂನಿನ ನೆಪವೊಡ್ಡಿ ಅರಣ್ಯ ಇಲಾಖೆ ವನ್ಯಜೀವಿ ವಿಭಾಗ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹೆಬ್ರಿಯಿಂದ ಕುಚ್ಚೂರಿಗೆ ಸಂಪರ್ಕಿಸುವ ರಸ್ತೆ ಅಗಲೀಕರಣಕ್ಕೆ ತಡೆ ಉಂಟು ಮಾಡುತ್ತಿದ್ದಾರೆ ಎಂದು ಫೆ. 27ರಂದು ಬೃಹತ್ ಸಂಖ್ಯೆಯಲ್ಲಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಸಮಸ್ಯೆ ಪರಿಹರಿಸುವಂತೆ ಭರವಸೆ
ಪ್ರತಿಭಟನಾ ಸ್ಥಳಕ್ಕಾಗಮಿಸಿದ ಅರಣ್ಯ ವನ್ಯಜೀವಿ ಇಲಾಖೆಯ ಡಿಎಫ್ಓ ಶಿವಾನಂದ ಬಾಬು, ಆರ್ಎಫ್ಒ ಗೌರವ್, ಲೋಕೋಪಯೋಗಿ ಇಲಾಖೆಯ ತ್ರಿನೇಶ್ವರ ಹಾಗೂ ಅಧಿಕಾರಿಗಳು ಗ್ರಾಮಸ್ಥರ ಮನವಿ ಸ್ವೀಕರಿಸಿ ಇನ್ನೆರಡು ದಿನಗಳ ಒಳಗೆ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು. ಇದಕ್ಕೆ ಒಪ್ಪದ ಗ್ರಾಮಸ್ಥರು ಇವತ್ತೆ ಸಮಸ್ಯೆ ಪರಿಹಾರ ಆಗಬೇಕು ಎಂದು ಪಟ್ಟು ಹಿಡಿದರು. ಈ ಸಂದರ್ಭ ಮಾತನಾಡಿದ ಡಿಎಫ್ಓ ಶಿವನಂದ ಬಾಬು, ರಸ್ತೆ ಅಗಲೀಕರಣ ಆಗಬೇಕಾದರೆ ಅರಣ್ಯ ಇಲಾಖೆಯಿಂದ ಎಫ್ಸಿ ತೆಗೆದುಕೊಳ್ಳಬೇಕು. ಈ ಕಾಮಗಾರಿಯ ಮಾಡುವ ಮೊದಲು ಅರಣ್ಯ ಇಲಾಖೆಯಿಂದ ಯಾವುದೇ ಎಫ್ಸಿ ತೆಗದುಕೊಳ್ಳದ ಕಾರಣ ಇದು ಕಾನೂನಿಗೆ ವಿರುದ್ಧವಾಗಿದೆ. ಅರಣ್ಯ ಇಲಾಖೆಯಿಂದ ಅಭಿವೃದ್ಧಿಗೆ ತೊಂದರೆ ಮಾಡುವುದಿಲ್ಲ. ಲೋಕೋಪಯೋಗಿ ಇಲಾಖೆಯವರು ಆನ್ಲೈನ್ ಎಫ್ಸಿಗೆ ಅರ್ಜಿ ಹಾಕಲಿ. ನಾನು ಇವತ್ತೇ ಬೆಂಗಳೂರಿಗೆ ಹೋಗಿ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿ ಎರಡು ದಿನಗಳ ಒಳಗೆ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಇಲಾಖೆ ಅಧಿಕಾರಿಗಳು ಪ್ರತಿಭಟನಾಕಾರರ ಮನವೊಲಿಸಿದ ನಂತರ ಪ್ರತಿಭಟನೆಯನ್ನು ಕೈ ಬಿಡಲಾಯಿತು. ಹೆಬ್ರಿ ಪೊಲೀಸ್ ಠಾಣಾಧಿಕಾರಿ ಮಹಂತೇಶ್ ನೇತೃತ್ವದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು. ಪ್ರತಿಭಟನಾ ಸ್ಥಳಕ್ಕೆ ಹೆಬ್ರಿ ತಹಶೀಲ್ದಾರ್ ಪ್ರಸಾದ್ ಭೇಟಿ ನೀಡಿ ಸಮಸ್ಯೆಯನ್ನು ಆಲಿಸಿದರು. ಪ್ರತಿಭಟನೆಯಲ್ಲಿ ಕುಚ್ಚೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಸಾಮಾಜಿಕ ಹೋರಾಟಗಾರರನ್ನು ಒಳಗೊಂಡಂತೆ 300ಕ್ಕೂ ಮಿಕ್ಕಿ ಗ್ರಾಮಸ್ಥರು ಭಾಗವಹಿಸಿದ್ದರು.

































































