ಬೆಂಗಳೂರು : ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು, ಐಎಎಸ್ ಅಧಿಕಾರಿಯಾಗಿದ್ದ, ಬಿಜೆಪಿ ಮುಖಂಡ, ನಟ ಕೆ. ಶಿವರಾಮ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.
ಫೆ. 28ರಂದು ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ, ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೋದಿ ರಸ್ತೆಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯಲ್ಲಿ 1953ರಲ್ಲಿ ಜನಿಸಿದ್ದ ಶಿವರಾಮು, 1985ರಲ್ಲಿ ಕೆಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಳಿಕ, ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು, ಐಎಎಸ್ ಅಧಿಕಾರಿಯೂ ಆಗಿದ್ದರು. ಆ ಮೂಲಕ, ಕನ್ನಡದಲ್ಲಿ ಐಎಎಸ್ ಬರೆದು, ಅಧಿಕಾರಿಯಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೂ ಭಾಜನರಾಗಿದ್ದಾರು. ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.






























































