ಹೀಟ್‌ವೇವ್‌ ಸ್ಟ್ರೋಕ್‌ ಸಾಧ್ಯತೆ : ಮುನ್ನೆಚ್ಚರಿಕೆ ವಹಿಸಲು ಸೂಚನೆ

ಉಡುಪಿ : ಮುಂದಿನ ದಿನಗಳಲ್ಲಿ ಬಿಸಿಲು ಇನ್ನಷ್ಟು ಪ್ರಖರವಾಗಲಿದ್ದು, ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗಲಿದೆ. ಹೀಟ್‌ವೇವ್ ಸ್ಟ್ರೋಕ್ ನಿಂದಾಗಿ (ಬಿಸಿ ಗಾಳಿ) ಜನರ ಆರೋಗ್ಯ ವ್ಯತ್ಯಯವಾಗಬಹುದು. ಈ ಹಿನ್ನೆಲೆಯಲ್ಲಿ ಜನರು ಕೆಲವು ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಲಹೆ ನೀಡಿದೆ.
ಹಗಲು ಹೊತ್ತು ಹೊರಗಡೆ ಹೋಗುವಾಗ ಕೊಡೆ ಬಳಸಬೇಕು ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಬೇಕು. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಬೇಕು. ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು. ಹತ್ತಿ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಬೇಕು. ಹಿರಿಯ ನಾಗರಿಕರು ಹಾಗೂ ಮಕ್ಕಳು ಹೆಚ್ಚು ನೀರು ಸೇವಿಸಬೇಕು.
ಬೆಳಗ್ಗೆ 11ರಿಂದ ಸಂಜೆ 4ರ ವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಆದಷ್ಟು ಕಡಿಮೆ ಮಾಡಬೇಕು. ಸಾಕಷ್ಟು ನೀರಿನೊಂದಿಗೆ ಮಜ್ಜಿಗೆ ಮತ್ತು ಗ್ಲೂಕೋಸ್‌ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು ಜೊತೆಗೆ ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ.
ಹೀಟ್ ವೇವ್ ಸ್ಟ್ರೋಕ್‌ಗೆ ಒಳಗಾದ ವ್ಯಕ್ತಿಯಲ್ಲಿ ಯಾವುದೇ ಸುಧಾರಣೆ ಕಂಡುಬರದಿದ್ದಲ್ಲಿ ತಕ್ಷಣ ಆಸ್ಪತ್ರೆಗೆ ದಾಖಲಿಸಬೇಕು. ತುರ್ತು ಸೇವೆಗಾಗಿ ಶುಲ್ಕ ರಹಿತ: 1077 ಹಾಗೂ ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.































































































error: Content is protected !!
Scroll to Top