ಬೆಂಗಳೂರು : ರಾಜ್ಯದ 7ನೇ ವೇತನ ಆಯೋಗವು ಮಾ. 16ರಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರು ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ವರದಿ ಸಲ್ಲಿಕೆ ಮಾಡಿದ್ದಾರೆ. ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17000 ರೂ ಗಳಿಂದ 27 ಸಾವಿರ ರೂಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ 2022ರ ನವೆಂಬರ್ 19ರಂದು 7ನೇ ವೇತನ ಆಯೋಗ ರಚಿಸಲಾಗಿತ್ತು. 6 ತಿಂಗಳು ಗಡುವು ನೀಡಲಾಗಿತ್ತು. ಈ ಅವಧಿಯಲ್ಲಿ ಸರ್ಕಾರ ಶೇ 17ರಷ್ಟು ಮಧ್ಯಂತರ ಪರಿಹಾರ ಘೋಷಿಸಿತ್ತು. ಅದಕ್ಕಾಗಿ ವಾರ್ಷಿಕ 10 ಸಾವಿರ ಕೋಟಿ ರೂ ಹೆಚ್ಚುವರಿ ನೀಡಲಾಗಿತ್ತು. ಅವಧಿಯನ್ನು 2023 ಮೇ 15ರಿಂದ ನವೆಂಬರ್ 18ರವರೆಗೆ ವಿಸ್ತರಿಸಲಾಗಿತ್ತು. ನಂತರ 2ನೇ ಬಾರಿ ಇದೇ ಮಾರ್ಚ್ 15ರವರೆಗೆ ವಿಸ್ತರಿಸಲಾಗಿತ್ತು. ಆಯೋಗದ ಅವಧಿ ಮುಕ್ತಾಯವಾಗಿದ್ದು, ಆಯೋಗ ಅಧ್ಯಕ್ಷ ಮತ್ತು ಸದಸ್ಯರು ಮುಖ್ಯಮಂತ್ರಿಗೆ ವರದಿ ಸಲ್ಲಿಸಿದ್ದಾರೆ.

ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡುವ ನಿರೀಕ್ಷೆ ಇದೆ’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದರು.















































