ಚುನಾವಣೆ : 62.42 ಕೋ. ರೂ. ಮೌಲ್ಯದ ವಸ್ತುಗಳು ವಶ

ಬೆಂಗಳೂರು: ಲೋಕಸಭೆ ಚುನಾವಣೆಗೆ ಮಾರ್ಚ್ 16ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಆ ನಂತರ ಕರ್ನಾಟಕದಲ್ಲಿ ಈವರೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 20.85 ಕೋಟಿ ರೂಪಾಯಿ ನಗದು ಮತ್ತು 27 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ, ಒಟ್ಟು 62.42 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಹೊರಡಿಸಿರುವ ಪ್ರಕಟಣೆಯ ಪ್ರಕಾರ, ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಫ್ಲೈಯಿಂಗ್ ಸ್ಕ್ವಾಡ್, ಸ್ಟ್ಯಾಟಿಕ್ ಸರ್ವೆಲೆನ್ಸ್ ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 20.85 ಕೋಟಿ ನಗದು, 70.86 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು (ಮತದಾರರಿಗೆ ಉಚಿತವಾಗಿ ಹಂಚಲು ಕೊಂಡೊಯ್ಯುತ್ತಿದ್ದುದು), 27 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 8.63 ಲಕ್ಷ ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
1.47 ಕೋಟಿ ರೂ.ಗೂ ಅಧಿಕ ಮೌಲ್ಯದ 211.23 ಕೆಜಿ ಮಾದಕ ವಸ್ತುಗಳು, 9 ಕೋಟಿ ರೂ.ಗೂ ಅಧಿಕ ಮೌಲ್ಯದ 15 ಕೆಜಿಗಿಂತ ಹೆಚ್ಚಿನ ಚಿನ್ನ, 27 ಲಕ್ಷ ರೂ.ಗೂ ಅಧಿಕ ಮೌಲ್ಯದ 59.04 ಕೆಜಿ ಬೆಳ್ಳಿ ಹಾಗೂ 9 ಲಕ್ಷ ರೂ. ಮೌಲ್ಯದ 21.17 ಕ್ಯಾರೆಟ್ ವಜ್ರವನ್ನು ವಶಪಡಿಸಿಕೊಳ್ಳಲಾಗಿದೆ.
ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹ ಮತ್ತು ಉಚಿತವಾಗಿ ಹಂಚಲು ಕೊಂಡೊಯ್ಯುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡ ಬಗ್ಗೆ ಅಧಿಕಾರಿಗಳು 969 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.



















































































error: Content is protected !!
Scroll to Top