ಹಳೆ ಸಾಂಪ್ರದಾಯಿಕ ಪದ್ಧತಿಯಲ್ಲೇ ಪದವಿ ಕೋರ್ಸ್‌

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಗಳ ಪದವಿ ಆನರ್ಸ್​​ ಅಧ್ಯಯನಕ್ಕೆ 2024-25ನೇ ಶೈಕ್ಷಣಿಕ ವರ್ಷದಿಂದ ನೀಡಲಾಗಿದ್ದ ಅವಕಾಶವನ್ನು ಹಿಂಪಡೆದು ಕಾಂಗ್ರೆಸ್ ಸರಕಾರ ಬುಧವಾರ ಆದೇಶ ಹೊರಡಿಸಿದೆ. ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿಯಲ್ಲಿನ ಶಿಫಾರಸುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.
ಇದರೊಂದಿಗೆ, ರಾಜ್ಯವು ರಾಷ್ಟ್ರೀಯ ಶಿಕ್ಷಣ (ಎನ್‌ಇಪಿ) ನೀತಿಯನ್ನು ಅಳವಡಿಸಿಕೊಳ್ಳುವುದಕ್ಕಿಂತಲೂ ಮೊದಲು, ಅಂದರೆ 2021-22ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಸಾಂಪ್ರದಾಯಿಕ ಮೂರು ವರ್ಷಗಳ ಪದವಿ ಕಾರ್ಯಕ್ರಮಕ್ಕೆ ಕರ್ನಾಟಕ ಮರಳಿದಂತಾಗಿದೆ.
ಬಿಜೆಪಿ ಸರಕಾರ ಇದ್ದಾಗ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡ ಮೊದಲ ರಾಜ್ಯವಾಗಿ ಕರ್ನಾಟಕ ಗುರುತಿಸಿಕೊಂಡಿತ್ತು. ಆದರೆ, ಕಳೆದ ವರ್ಷ ಅಧಿಕಾರಕ್ಕೆ ಬಂದ ನಂತರ ಅದನ್ನು ರದ್ದುಗೊಳಿಸಲು ಕಾಂಗ್ರೆಸ್ ನಿರ್ಧರಿಸಿತ್ತು.
ತನ್ನ ಆದೇಶವನ್ನು ಸಮರ್ಥಿಸಿಕೊಂಡಿರುವ ಉನ್ನತ ಶಿಕ್ಷಣ ಇಲಾಖೆ, ಎಸ್​​​ಇಪಿ ಆಯೋಗದ ವಿಸ್ತೃತ ಸಮಾಲೋಚನೆಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ. ಐತಿಹಾಸಿಕ ಅನುಭವ, ವಿದ್ಯಾರ್ಥಿಗಳ ಒಟ್ಟಾರೆ ಹಿತಾಸಕ್ತಿ, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ವಿವಿಧ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಸಮಾನ ಅವಕಾಶವನ್ನು ನೀಡುವುದನ್ನು ಗಮನದಲ್ಲಿಟ್ಟುಕೊಂಡು ಎಸ್​​​ಇಪಿ ಆಯೋಗ ಶಿಫಾರಸುಗಳ್ನು ಮಾಡಿದೆ ಎಂದು ಇಲಾಖೆ ಹೇಳಿದೆ.
ಜಾಗತಿಕ ಶಿಕ್ಷಣ ವ್ಯವಸ್ಥೆಗಳೊಂದಿಗೆ ಸಮಾನತೆಯನ್ನು ತರುವ ಉದ್ದೇಶದಲ್ಲಿ ಪದವಿ ಶಿಕ್ಷಣದ ಅವಧಿಯನ್ನು ನಾಲ್ಕು ವರ್ಷಗಳವರೆಗೆ ಬದಲಾಯಿಸಲು ಮುಂದಾಗಿರುವುದು ಕಂಡುಬಂದಿದೆ. ವಿಶೇಷವಾಗಿ ಅಮೆರಿಕದ ವ್ಯವಸ್ಥೆಗೆ ಪೂರಕವಾಗಿ ಇದನ್ನು ಮಾಡಲು ಮುಂದಾಗಲಾಗಿತ್ತು. ಇದರಿಂದ ಭಾರತದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಸ್ನಾತಕೋತ್ತರ ಪದವಿ ಪ್ರವೇಶ ಸುಲಭವಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ, ನಾಲ್ಕು ವರ್ಷಗಳ ಪದವಿ ಇಟ್ಟುಕೊಳ್ಳುವುದರಿಂದ ಬಡವರು, ಸಾಮಾಜಿಕವಾಗಿ ಹಿಂದುಳಿದ ವರ್ಗಗಳಾದ ಎಸ್‌ಸಿಗಳು, ಎಸ್‌ಟಿಗಳು, ಮಹಿಳೆಯರು ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣದ ಪ್ರವೇಶ ಕಡಿಮೆಯಾಗಲಿದೆ ಎಂದು ಸರಕಾರ ವಾದಿಸಿದೆ.
ಮೂಲಸೌಕರ್ಯಗಳ ಕೊರತೆ ಮತ್ತು ಸೌಲಭ್ಯಗಳು, ಪ್ರಾಧ್ಯಾಪಕರ ಲಭ್ಯತೆಯಿಲ್ಲದಿರುವುದು ನಾಲ್ಕು ವರ್ಷಗಳ ಪದವಿ ಕಾರ್ಯಕ್ರಮವನ್ನು ಪ್ರಾರಂಭಿಸಲು ಕಾಲೇಜುಗಳು ಮುಂದಾಗದಿರುವುದಕ್ಕೆ ಒಂದು ಕಾರಣವೆಂದು ಉಲ್ಲೇಖಿಸಲಾಗಿದೆ.















































error: Content is protected !!
Scroll to Top