ಕಾರ್ಕಳ : ಉಡುಪಿ ಜಿಲ್ಲೆಯ ಎಲ್ಲೂರು ಗ್ರಾಮದ ನಂದಿಕೂರಿನಿಂದ ಕೇರಳದ ಕಾಸರಗೋಡಿಗೆ ವಿದ್ಯುತ್ ಸರಬರಾಜಿಗಾಗಿ ಇನ್ನಾ ಗ್ರಾಮದ ಕೃಷಿ ಭೂಮಿಯಲ್ಲಿ ಟವರ್ ನಿರ್ಮಾಣಕ್ಕೆ ಮುಂದಾದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 8 ಟವರ್ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ. ಈಗಾಗಲೇ ಸರಕಾರಿ ಜಾಗದಲ್ಲಿ ಕಾಮಗಾರಿ ಪ್ರಾರಂಭಿಸಿದ ಅಧಿಕಾರಿಗಳು ಮೇ 28ರಂದು ಖಾಸಗಿ ಜಾಗದಲ್ಲಿ ಕೃಷಿ ಗದ್ದೆಯಲ್ಲೇ ಟವರ್ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಈ ಸಂದರ್ಭ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.
ಡಿಸಿ ವಿರುದ್ಧ ಹೋರಾಟದ ಎಚ್ಚರಿಕೆ
ಜಮೀನಿನ ಮಾಲಕರಿಗೆ ಯಾವುದೇ ನೋಟೀಸ್ ನೀಡದೆ ಏಕಾಏಕಿ ಕೃಷಿ ಭೂಮಿಗೆ ಜೆಸಿಬಿ ಯಂತ್ರವನ್ನು ತಂದು ಟವರ್ ನಿರ್ಮಾಣಕ್ಕೆ ಮುಂದಾದಾಗ ಅಧಿಕಾರಿಗಳು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು ಯಾವುದೇ ಕಾರಣಕ್ಕೂ ಖಾಸಗಿ ಜಾಗದಲ್ಲಿ ಟವರ್ ನಿರ್ಮಾಣಕ್ಕೆ ಬಿಡುವುದಿಲ್ಲ. ಜಿಲ್ಲಾಧಿಕಾರಿಗಳು ಎಸಿ ರೂಮಿನಲ್ಲಿ ಕುಳಿತು ಆದೇಶ ಹೊರಡಿಸುವುದಲ್ಲ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿ. ಜನರ ವಿರೋಧದ ನಡುವೆ ಕಾಮಗಾರಿ ಮುಂದುವರಿಸಿದರೆ ಜಿಲ್ಲಾಧಿಕಾರಿಗಳ ವಿರುದ್ಧವೇ ಹೋರಾಟ ಮಾಡುತ್ತೇವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.































































