ಬೆಂಗಳೂರು : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಕ್ಷಣ ಅಲ್ಲಿಯೇ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಮೇ 29ರಂದು ಹೇಳಿದ್ದಾರೆ.
ಅಧಿಕೃತ ಮೂಲಗಳ ಪ್ರಕಾರ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 30 ರಂದು ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗಲು ವಿಮಾನ ಟಿಕೆಟ್ ಕಾಯ್ದಿರಿಸಿದ್ದಾರೆ ಮತ್ತು ಮೇ 31ರಂದು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ನಿರೀಕ್ಷೆಯಿದೆ. ಈ ಕುರಿತು ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಪ್ರಜ್ವಲ್ ವಿರುದ್ಧ ವಾರೆಂಟ್ ಜಾರಿಯಾಗಿರುವುದರಿಂದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಎಸ್‌ಐಟಿ ಕಾಯುತ್ತಿದೆ. ಆತನನ್ನು ಬಂಧಿಸಿ ಹೇಳಿಕೆ ಪಡೆಯಲಿದ್ದಾರೆ(ಎಸ್‌ಐಟಿ) ಎಂದರು.
ಪ್ರಜ್ವಲ್ ರೇವಣ್ಣ ಲ್ಯಾಂಡ್ ಆದ ತಕ್ಷಣ ವಿಮಾನ ನಿಲ್ದಾಣದಲ್ಲಿಯೇ ಬಂಧಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ, “ವಿಮಾನ ನಿಲ್ದಾಣದಲ್ಲಿಯೇ ಅವರನ್ನು ಬಂಧಿಸಬೇಕಾಗಿದೆ. ಏಕೆಂದರೆ ಅವರ ವಿರುದ್ಧ ವಾರಂಟ್ ಹೊರಡಿಸಲಾಗಿದೆ. ಆದ್ದರಿಂದ ಅವರನ್ನು ಬಂಧಿಸಬೇಕಾಗುತ್ತದೆ” ಎಂದರು.































































