ಬೆಂಗಳೂರು : ಲೋಕಸಭೆ ಚುನಾವಣೆ 2024ರ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ, ಈ ನಡುವೆ ಹಲವು ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಮಾಜಿ ಸಿಎಂ ಹಾಗೂ ಹಾವೇರಿಯ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಗೆದ್ದು ಬೀಗಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಲ್ಕರ್ ಸೋಲನ್ನು ಅನುಭವಿಸಿದ್ದಾರೆ. ಮಂಡ್ಯ ಅಭ್ಯರ್ಥಿ ಎಚ್. ಡಿ ಕುಮಾರಸ್ವಾಮಿ ಸುಮಾರು 2 ಲಕ್ಷ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ಗೆಲುವಿನತ್ತ ಹೆಜ್ಜೆ ಹಾಕಿದ್ದು ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.
ಇನ್ನು ಚಿಕ್ಕಬಳ್ಳಾಪು ರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಕೆ. ಸುಧಾಕರ್ ಜಯ ಗಳಿಸಿದ್ದಾರೆ. ಬಳ್ಳಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ತುಕರಾಮ್ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಸೋಲಾಗಿದೆ. ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರು ಹೀನಾಯ ಸೋಲು ಅನುಭವಿಸಿದ್ದಾರೆ. ಕಾರವಾರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗ್ಗಡೆ ಜಯಗಳಿಸಿದ್ದು , ಕೈ ನಾಯಕಿ ಅಂಜಲಿ ನಿಂಬಲ್ಕರ್ ಸೋತಿದ್ದಾರೆ.

































































