ಇನ್ನು ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಕ್ಲಾಸ್‌

ಬೆಂಗಳೂರು: ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಇನ್ನು ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳು ಪ್ರಾರಂಭವಾಗಲಿವೆ. ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸುವುದಕ್ಕೆ ಅಂಗನವಾಡಿ ಕಾರ್ಯಕರ್ತೆಯರು ತೀವ್ರ ವಿರೋಧ ವ್ಯಕ್ತಪಡಿಸಿದ ಬಳಿಕ ಸರಕಾರ ಅಂಗನವಾಡಿಗಳನ್ನೇ ಮೊಂಟೆಸ್ಸರಿಗಳಾಗಿ ಮೇಲ್ದರ್ಜೆಗೇರಿಸಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸಲು ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚನೆಗೆ ಸಿಎಂ ಸೂಚಿಸಿದ್ದಾರೆ ಎಂದು ಹೇಳಿದರು.
ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ನೀಡುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು ಎಂದರು.
ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮೊಂಟೆಸ್ಸರಿ ಆರಂಭಿಸಲು ಮುಂದಾಗಿತ್ತು. ಇದಕ್ಕೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಅಂಗನವಾಡಿ ಶಿಕ್ಷಕಿಯರ ಪೈಕಿ 9 ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ ಗುಣಮಟ್ಟದ ಶಿಕ್ಷಣ ನೀಡಲು ಯಾವುದೇ ಸಮಸ್ಯೆ ಆಗದು. ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.



























































































































error: Content is protected !!
Scroll to Top