ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೆ ಹೋರಾಟ : ಬಿಜೆಪಿ ನಿರ್ಧಾರ

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ನಿಲ್ಲಿಸದಿರಲು ಬಿಜೆಪಿ ತೀರ್ಮಾನಿಸಿದೆ. ಗುರುವಾರ ಪಕ್ಷದ ರಾಜ್ಯ ವಿಶೇಷ ಕಾರ್ಯಕಾರಿಣಿಯ ಬಳಿಕ ನಡೆದ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್‍ದಾಸ್‌ ಅಗರ್‌ವಾಲ್‌, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬಿಜೆಪಿಯ ಹೋರಾಟದ ಫಲವಾಗಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ‘ಮುಡಾ’ ಹಗರಣದ ವಿರುದ್ಧವೂ ಹೋರಾಟ ತೀವ್ರಗೊಳಿಸಬೇಕು. ಮುಖ್ಯಮಂತ್ರಿ ರಾಜೀನಾಮೆಗೆ ಪಟ್ಟುಹಿಡಿಯಬೇಕು ಎಂದು ಸೂಚಿಸಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ದಯನೀಯ ಸೋಲು ಕಂಡಿದೆ. ರಾಜ್ಯ ಸರ್ಕಾರದ ವಿರುದ್ಧ ಜನರು ಮತ ಚಲಾಯಿಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಮತ್ತೆ ಚುನಾವಣೆ ಎದುರಿಸಬೇಕು ಎಂದು ಒತ್ತಾಯಿಸಲು ಬಿಜೆಪಿ ತೀರ್ಮಾನಿಸಿದೆ.
ಬಿಜೆ‍ಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಸ್ಥಾನಗಳನ್ನು ಪಡೆಯಲು ಸಾಧ್ಯವಾಗದಿದ್ದರೂ, 142 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಮತ ಪ್ರಮಾಣವೂ ಹೆಚ್ಚಾಗಿದೆ. ಫಲಿತಾಂಶ ಕುರಿತು ಕಾಂಗ್ರೆಸ್‌ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.
ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಸಿದ್ದರಾಮಯ್ಯ ಅವರಿಗೆ ಧೈರ್ಯವಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಚುನಾವಣೆಗೆ ಕರೆ ನೀಡಲಿ ಎಂದು ಸವಾಲು ಹಾಕಿದರು.







































































error: Content is protected !!
Scroll to Top