ಚಿಕ್ಕಮಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲು
ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಆತಂಕಕಾರಿಯಾಗಿ ಹೆಚ್ಚಾಗುತ್ತಿದ್ದು, ಡೆಂಗ್ಯೂ ಸಂಬಂಧಿತ ಸಾವು-ನೋವುಗಳನ್ನು ತಡೆಗಟ್ಟಲು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಡೆಂಗ್ಯೂ ಪ್ರಕರಣಗಳ ಪರಿಣಾಮಕಾರಿ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಬೆಡ್ ಗಳನ್ನು ಕಾಯ್ದಿರಿಸುವಂತೆ ಆದೇಶಿಸಿದೆ.

ರಾಜ್ಯದಲ್ಲಿ ಇದುವರೆಗೆ 10,973 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 4,040 ಬಿಬಿಎಂಪಿ ವ್ಯಾಪ್ತಿಯಲ್ಲಿ, 63 ಬೆಂಗಳೂರು ನಗರ ಮತ್ತು 51 ಬೆಂಗಳೂರು ಗ್ರಾಮಾಂತರದಲ್ಲಿ ವರದಿಯಾಗಿವೆ. ಚಿಕ್ಕಮಗಳೂರಿನಲ್ಲಿ ರಾಜ್ಯದಲ್ಲಿಯೇ ಎರಡನೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಒಟ್ಟು 621 ಪ್ರಕರಣಗಳು ದಾಖಲಾಗಿವೆ.

ಮಳೆಗಾಲವಾಗಿರುವುದರಿಂದ ಡೆಂಗ್ಯೂ ಪ್ರಕರಣ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಸೆಪ್ಟೆಂಬರ್ ವರೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಾಭಿವೃದ್ಧಿ, ಕಂದಾಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಇಲಾಖೆಗಳ ಮೂಲಕ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದ್ದೇವೆ. ಸರಕಾರದ ಜೊತೆಗೆ ಶಾಸಕರು ಸೇರಿದಂತೆ ಇತರೆ ಜನಪ್ರತಿನಿಧಿಗಳು ಕೈಜೋಡಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.



















