ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಅಂಗಾಂಗ ದಾನದ ಕುರಿತು ಜಾಗೃತಿ ಕಾರ್ಯಕ್ರಮ

ಕಾರ್ಕಳ : ರೋಗದ ಚಿಕಿತ್ಸೆಗಿಂತ ತಡೆಗಟ್ಟುವಿಕೆ ಉತ್ತಮ ಎಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮೂತ್ರಪಿಂಡ ವಿಭಾಗದ ಪ್ರಾಧ್ಯಾಪಕ ಡಾ. ಶಂಕರ್ ಪ್ರಸಾದ್‌ ಅಭಿಪ್ರಾಯಪಟ್ಟರು.
ಅವರು ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ ಕಾರ್ಕಳ, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನೆಫ್ರಾಲಜಿ ವಿಭಾಗ ಮತ್ತು ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಕಳ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಆ. 3 ರಂದು ನಡೆದ ಅಂಗಾಂಗ ದಾನದ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ದೀರ್ಘಕಾಲದ ಮೂತ್ರಪಿಂಡ ಕಾಯಿಲೆ ಮತ್ತು ಕೊನೆಯ ಹಂತದ ಮೂತ್ರಪಿಂಡ ಕಾಯಿಲೆ ಕುರಿತು ಮಾಹಿತಿ ನೀಡಿ ಅವರು ಆರೋಗ್ಯಕರ ಜೀವನಶೈಲಿ ಮತ್ತು ನಿಯಮಿತ ಮೇಲ್ವಿಚಾರಣೆಯ ಮೂಲಕ ರೋಗ ತಡೆಗಟ್ಟಬಹುದು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ್‌, ರಾಷ್ಟ್ರೀಯ ಅಂಗದಾನ ದಿನದ ಮಹತ್ವದ ಕುರಿತು ವಿವರಿಸಿದರು. ಆಸ್ಪತ್ರೆಯಲ್ಲಿ ಲಭ್ಯವಿರುವ ಮೂತ್ರಪಿಂಡ ಚಿಕಿತ್ಸೆ ಮತ್ತು ಡಯಾಲಿಸಿಸ್ ಸೇವೆಗಳ ಕುರಿತು ಮಾಹಿತಿ ನೀಡಿದ ಅವರು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಅತಿ ಕಡಿಮೆ ದರದಲ್ಲಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆಯನ್ನು ರೋಗಿಗಳಿಗೆ ನೀಡುತ್ತಿದ್ದೇವೆ ಎಂದರು.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಅಂಗಾಂಗ ಕಸಿ ಸಂಯೋಜಕಿ ಕೀರ್ತಿ ಅವರು ಅಂಗಾಂಗ ದಾನದ ಕಾನೂನು ಮತ್ತು ನೈತಿಕ ಅಂಶಗಳ ಬಗ್ಗೆ ವಿವರಿಸಿ, ಜೀವಂತ ದಾನ ಮತ್ತು ಮೆದುಳು ನಿಷ್ಕ್ರೀಯಗೊಂಡ ವ್ಯಕ್ತಿಯ ದಾನದ ಕಾರ್ಯವಿಧಾನಗಳನ್ನು ವಿವರಿಸಿದರು.

ಮೂತ್ರಪಿಂಡ ರೋಗಿಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮೂತ್ರಪಿಂಡ ವಿಭಾಗ ಮುಖ್ಯಸ್ಥ ಡಾ. ದರ್ಶನ್ ರಂಗಸ್ವಾಮಿ ಸ್ವಾಗತಿಸಿದರು. ಮೂತ್ರಪಿಂಡ ವಿಭಾಗದ ಪ್ರಾಧ್ಯಪಕ ಡಾ. ರವೀಂದ್ರ ಪ್ರಭು ಸಂವಾದ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು. ಅನುಷಾ ಪ್ರಭು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.





























































































































error: Content is protected !!
Scroll to Top