ಯಾವುದಕ್ಕೂ ಹೆದರಲ್ಲ, ತನಿಖೆಗೆ ಸಿದ್ದ – ಸಿದ್ದರಾಮಯ್ಯ
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ.
ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಈಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದೆ. ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆ.156(3) ಅಡಿ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.
ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳೊಂದಿಗೆ ಮೊದಲ ಬಾರಿಗೆ ಮಾತನಾಡಿದ ಸಿಎಂ, ನಿನ್ನೆ ಹೈಕೋರ್ಟ್ 17ಎ ಅನ್ವಯ ತನಿಖೆ ನಡೆಸುವಂತೆ ಆದೇಶಿಸಿತ್ತು. ಹೈಕೋರ್ಟ್ ಆದೇಶ ಮೇಳೆ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿದೆ. ಕೋರ್ಟ್ ತೀರ್ಪಿನ ಪ್ರತಿ ಸಿಕ್ಕಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ತನಿಖೆ ಎದುರಿಸಲು ನಾವು ತಯಾರಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಕೋರ್ಟ್ ಆದೇಶ ಸಿಕ್ಕಿದ ಮೇಲೆ ವಕೀಲರ ಜತೆ ಚರ್ಚಿಸ್ತೇನೆ ಆ ನಂತರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ. ನಿನ್ನೆಯೂ ನಾನು ಹೇಳಿದ್ದೇನೆ, ಈಗಲೂ ಪುನರುಚ್ಚರಿಸುತ್ತಿದ್ದೇನೆ. ತನಿಖೆಗೆ ನಾನು ಹೆದರುವುದಿಲ್ಲ. ದೂರುದಾರರು ಮೈಸೂರಿನವರು, ಹೀಗಾಗಿ ಅಲ್ಲೇ ತನಿಖೆ ಆಗುತ್ತೆ. ಆದೇಶ ಓದಿದ ನಂತರ ಸಂಪೂರ್ಣ ಪ್ರತಿಕ್ರಿಯೆ ನೀಡಬೇಕು. ಆದೇಶದ ಪ್ರತಿಯನ್ನು ಓದಿದ ಮೇಲೆ ಪ್ರತಿಕ್ರಿಯೆ ನೀಡುತ್ತೇನೆ. ಮುಂದಿನ ನಿರ್ಧಾರದ ಬಗ್ಗೆ ನಾಳೆ (ಸೆ.26) ಬೆಳಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದರು.
























