ಕಾರ್ಕಳ : ಗ್ರಾಮೀಣಾಭಿವೃದ್ಧಿಯ ಗುರಿಸಾಧನೆಗಾಗಿ ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸಬೇಕಾದುದು ಇಂದಿನ ಆದ್ಯತೆಯಾಗಿದೆ. ಆ ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಅನಿವಾರ್ಯವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿರು.
ಅವರು ಅ. 9ರಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಪೂರ್ವತಯಾರಿ ನಿಮಿತ್ತ ನಡೆದ ಗ್ರಾಮ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಪಂಚಾಯತ್ ರಾಜ್ ವ್ಯವಸ್ಥೆಯ ಹಾಗೂ ಸಹಕಾರಿ ಕ್ಷೇತ್ರದ ಬಗ್ಗೆ ಅಪಾರ ಅನುಭವ ಹೊಂದಿರುವ ರಾಜು ಪೂಜಾರಿಯವರನ್ನು ಚುನಾವಣಾ ಕಣಕ್ಕಿಳಿಸಿದೆ. ಗ್ರಾಮ ಪಂಚಾಯತ್ ಸದಸ್ಯನಾಗಿ, ಅಧ್ಯಕ್ಷನಾಗಿ, ತಾಲೂಕು ಪಂಚಾಯತ್ ಸದಸ್ಯನಾಗಿ, ಜಿಲ್ಲಾ ಪಂಚಾಯತ್ ಸದಸ್ಯ, ಅಧ್ಯಕ್ಷನಾಗಿ ಅವಿಭಜಿತ ದ.ಕ. ಜಿಲ್ಲೆಯ ಜನರಿಗೆ ನ್ಯಾಯ ಒದಗಿಸಿ ಕೊಟ್ಟ ವ್ಯಕ್ತಿ ಇಂದು ಅಭ್ಯರ್ಥಿಯಾಗಿದ್ದಾರೆ ಎಂದವರು ಹೇಳಿದರು.

ಕೆಪಿಸಿಸಿ ಪ್ರಚಾರ ಸಮಿತಿ ಸದಸ್ಯ ವಿನಯ ಕುಮಾರ್ ಸೊರಕೆ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮುನಿಯಾಲು ಉದಯ ಕುಮಾರ್ ಶೆಟ್ಟಿ ಅವರು ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿಯವರನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ಅಭ್ಯರ್ಥಿ ರಾಜು ಪೂಜಾರಿ ಮಾತನಾಡಿ ತನ್ನ ಗೆಲುವು ಅದು ಕಾರ್ಯಕರ್ತರ ಗೆಲುವು. ತಾನು ಗೆದ್ದು ವಿಧಾನ ಪರಿಷತ್ ಸದಸ್ಯನಾದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಲಿದ್ದೇನೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಖೆಬೈಲ್, ಕೆಪಿಸಿಸಿ ಉಸ್ತವಾರಿ ಎಂ.ಎಸ್. ಮಹಮ್ಮದ್, ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಬಾಯರಿ, ಅಲ್ಪ ಸಂಖ್ಯಾತ ಘಟಕಾಧ್ಯಕ್ಷ ಸಯಿಫುದ್ದೀನ್ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದ ರಾವ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ವಂದಿಸಿದರು.
































































