ಮನು ಭಾಕರ್‌ ಮತ್ತು ಗುಕೇಶ್‌ ಸೇರಿದಂತೆ ನಾಲ್ವರು ಕ್ರೀಡಾ ಸಾಧಕರಿಗೆ ಖೇಲ್‌ ರತ್ನ ಪ್ರಶಸ್ತಿ

ದೆಹಲಿ : ಒಲಿಂಪಿಕ್ಸ್‌ನಲ್ಲಿ ಎರಡೆರಡು ಕಂಚಿನ ಪದಕಕ್ಕೆ ಕೊರಳೊಡ್ಡಿದ್ದ ಶೂಟರ್ ಮನು ಭಾಕರ್‌, ಚೆಸ್‌ ವಿಶ್ವ ಚಾಂಪಿಯನ್‌ ದೊಮ್ಮರಾಜು ಗುಕೇಶ್‌ ಸೇರಿ ನಾಲ್ವರನ್ನು ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕ್ರೀಡಾ ಸಚಿವಾಲಯ ತಿಳಿಸಿದೆ. ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ವಿಶೇಷವಾಗಿ ಆಯೋಜಿಸಲಾಗುವ ಸಮಾರಂಭದಲ್ಲಿ ಈ ನಾಲ್ವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ಮನು ಭಾಕರ್, ಕಳೆದ ವರ್ಷ ನಡೆದಿದ್ದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮತ್ತು 25 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕ ಗೆದ್ದಿದ್ದರು. ಇದಲ್ಲದೆ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಕಳೆದ ಡಿಸೆಂಬರ್ 12 ರಂದು ಸಿಂಗಾಪುರದಲ್ಲಿ ನಡೆದಿದ್ದ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ ಫೈನಲ್​ನಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಚಾಂಪಿಯನ್‌ ಕಿರೀಟ ತೊಟ್ಟಿದ್ದ ಡಿ ಗುಕೇಶ್ ಅವರಿಗೂ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಕೇವಲ 18 ನೇ ವಯಸ್ಸಿನಲ್ಲಿ ವಿಶ್ವ ಚೆಸ್ ಚಾಂಪಿಯನ್ ಗೆಲ್ಲುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದ ಗುಕೇಶ್ ಇದೀಗ ದೇಶದ ಅತಿದೊಡ್ಡ ಕ್ರೀಡಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮನು ಭಾಕರ್ ಹಾಗೂ ಡಿ ಗುಕೇಶ್ ಅಲ್ಲದೆ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ರವೀಣ್ ಕುಮಾರ್ ಕೂಡ ಖೇಲ್ ರತ್ನ ಪ್ರಶಸ್ತಿಯನ್ನು ಪಡೆದಿದ್ದಾರೆ. ಪ್ರಸ್ತುತ ಭಾರತ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರ ನಾಯಕತ್ವದಲ್ಲಿ ಭಾರತ ತಂಡ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದುಕೊಂಡಿತ್ತು. ಹಾಗೆಯೇ ಕಳೆದ ವರ್ಷ ನಡೆದಿದ್ದ ಪ್ಯಾರಾಲಿಂಪಿಕ್ಸ್​ನಲ್ಲಿ ಹೈಜಂಪ್ ಟಿ64 ಸ್ಪರ್ಧೆಯಲ್ಲಿ ದೇಶಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದ ಪ್ರವೀಣ್ ಕುಮಾರ್ ಅವರಿಗೂ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ.









































error: Content is protected !!
Scroll to Top