ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಿ – ಸ್ಥಳೀಯ ಸಂಸ್ಥೆಗಳಿಗೆ ಡಿಸಿ ಸೂಚನೆ

ಉಡುಪಿ : ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ .ಕೆ. ವಿದ್ಯಾಕುಮಾರಿ ಅವರು ಸೂಚನೆ ನೀಡಿದರು.
ಅವರು ಜ. 21ರಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಾಯಿ ಕಡಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬಗ್ಗೆ ಅನೇಕ ದೂರುಗಳು ಸಹ ಬರುತ್ತಿವೆ. ನಾಯಿಗಳ ಸಂತಾನ ನಿಯಂತ್ರಣ ಶಸ್ತ್ರ ಚಿಕಿತ್ಸೆಗೆ ನಗರ ಹಾಗೂ ಗ್ರಾಮೀಣ ಮಟ್ಟದ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್‌ ಗಳು ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣಕ್ಕಾಗಿ ಬಜೆಟ್ ನಲ್ಲಿ ಅನುದಾನ ಮಿಸಲಿರಿಸಿ, ಅವುಗಳ ಸಂತಾನ ನಿಯಂತ್ರಣಕ್ಕೆ ಮುಂದಾಗಬೇಕು ಎಂದರು.

ಗಣತಿ ಕಾರ್ಯ ಕೈಗೊಳ್ಳಬೇಕು
ಸ್ಥಳೀಯ ಸಂಸ್ಥೆಗಳು ಪ್ರತಿ ಮೂರು ತಿಂಗಳಿಗೊಮ್ಮೆ ಬೀದಿ ನಾಯಿಗಳ ಗಣತಿ ಕಾರ್ಯ ಕೈಗೊಳ್ಳಬೇಕು. ಒಂದೊಮ್ಮೆ ತಕ್ಷಣದಲ್ಲಿ ಗಣತಿ ಕಾರ್ಯ ಕೈಗೊಳ್ಳಲು ಸಾಧ್ಯವಾಗದೇ ಇದ್ದಲ್ಲಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಪ್ರದೇಶದ ಜನ ಸಂಖ್ಯೆಯ ಶೇ. 2ರಷ್ಟು ಬೀದಿ ನಾಯಿಗಳು ಇವೆ ಎಂದು ಪರಿಗಣಿಸಿ, ಒಟ್ಟು ನಾಯಿಗಳ ಅರ್ಧದಷ್ಟು ಪ್ರತಿ ವರ್ಷ ಸಂತಾನ ಹರಣ ಶಸ್ತ್ರ ಚಿಕಿತ್ಸೆಗೆ ಒಳಪಡಿಸಿರುವ ನಾಯಿಗಳ ಸಂಖ್ಯೆ ಎಂದು ಪರಿಗಣಿಸಬೇಕು ಎಂದರು.

ಪರಿಹಾರ ವಿತರಣೆಯಾಗಬೇಕು
ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳು ಆಕ್ರಮಣ ಮಾಡಿ ಕಚ್ಚಿದಾಗ 5 ಸಾವಿರ ರೂ., ಒಂದೊಮ್ಮೆ ವ್ಯಕ್ತಿಯು ಮರಣ ಹೊಂದಿದಲ್ಲಿ 5 ಲಕ್ಷ ರೂ. ಗಳನ್ನು ಸ್ಥಳೀಯ ಸಂಸ್ಥೆಗಳೇ ಸಂತ್ರಸ್ತ ವ್ಯಕ್ತಿಗೆ ಅಥವಾ ವಾರಸುದಾರರಿಗೆ ಪರಿಹಾರ ರೂಪದಲ್ಲಿ ಹಣವನ್ನು ನಿಯಮಾನುಸಾರ ವಿತರಿಸಬೇಕು ಎಂದು ಡಿಸಿ ತಿಳಿಸಿದರು.

2023-24 ನೀ ಸಾಲಿನಲ್ಲಿ ಎಬಿಸಿ ಕಾರ್ಯಕ್ರಮದ ಅನ್ವಯ ಜಿಲ್ಲೆಯಲ್ಲಿ 1,576 ಗಂಡು ಹಾಗೂ 1,878 ಹೆಣ್ಣು ಸೇರಿದಂತೆ ಒಟ್ಟು 3,454 ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಡಿಸೆಂಬರ್ ವರೆಗೆ 481 ಗಂಡು, 981 ಹೆಣ್ಣು ಸೇರಿದಂತೆ 1462 ನಾಯಿಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಮಾರ್ಚ್ ಒಳಗಾಗಿ ನಾಯಿಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆಯನ್ನು ಕಳೆದ ವರ್ಷಕ್ಕಿಂತ ಹೆಚ್ಚು ಮಾಡಬೇಕು ಎಂದರು ಎಂದು ಸ್ಥಳೀಯಾಡಳಿತ ಸಂಸ್ಥೆಯ ಅಧಿಕಾರಿಗಳಿಗೆ ಡಿಸಿ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಮಾತನಾಡಿ, ಸರಕಾರ ಪ್ರಾಣಿಗಳ ಹಿತಕ್ಕಾಗಿ ಅನೇಕ ಕಾನೂನುಗಳು ಹಾಗೂ ನಿಯಮಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಒಂದೊಮ್ಮೆ ಉಲ್ಲಂಘನೆಗೊಂಡಲ್ಲಿ ಕಾನೂನಿನ ಅನ್ವಯ ಕ್ರಮಕ್ಕೆ ಆಸ್ಪದವಾಗುತ್ತದೆ. ಇದಕ್ಕೆ ಅವಕಾಶ ಮಾಡಿಕೊಡಬಾರದು. ಅವುಗಳಿಗೂ ಸಹ ನಮ್ಮ ಹಾಗೆ ಭೂಮಿಯ ಮೇಲೆ ವಾಸಿಸುವ ಹಕ್ಕು ಇದೆ ಎಂದರು.
ಸಭೆಯಲ್ಲಿ ಪ್ರಭಾರ ಅಪರ ಜಿಲ್ಲಾಧಿಕಾರಿ ನಾಗರಾಜ್ ವಿ. ನಾಯಕ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಎಂ.ಸಿ. ರೆಡ್ಡಪ್ಪ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.





























































































































error: Content is protected !!
Scroll to Top