ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಣಿ ಸಭೆ – ಪಕ್ಷದ ವಿವಿಧ ಘಟಕಗಳಿಗೆ ಅಧ್ಯಕ್ಷರ ನೇಮಕ

ಕಾರ್ಕಳ : ಪಕ್ಷ ಸಂಘಟನೆಯಲ್ಲಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಕಾಂಗ್ರೆಸ್‌ ಮುಖಂಡ ಉದಯ ಶೆಟ್ಟಿ ಮುನಿಯಾಲು ಮನವಿ ಮಾಡಿಕೊಂಡರು.
ಅವರು ಫೆ. 1ರಂದು ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಕಾರ್ಕಳ ಬ್ಲಾಕ್ ಕಾಂಗ್ರೆಸ್‌ನ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಮಾತನಾಡಿ, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಪಕ್ಷ ಸಂಘಟನೆಗಾಗಿ ಶ್ರಮಿಸಬೇಕೆಂದರು.

ನಮ್ಮೆಲ್ಲರ ಹೊಣೆ
ಹಿರಿಯ ನ್ಯಾಯವಾದಿ, ಕಾಂಗ್ರೆಸ್ ಮುಖಂಡ ಶೇಖರ ಮಡಿವಾಳ್‌ ಮಾತನಾಡಿ, ಬಿಜೆಪಿ ಆಡಳಿತದಲ್ಲಿ ಸಂವಿಧಾನಕ್ಕೆ ಅಪಾಯ ಎದುರಾಗಿದೆ. ಸಂವಿಧಾನ ಇರುವ ಕಾರಣ ಇಂದು ದೇಶದ ಜನ ಸಾಮಾನ್ಯರೂ ಸಮಾನ ಹಕ್ಕುಗಳಿಂದ ಬದುಕುವಂತಾಗಿದೆ. ಇಂತಹ ಶ್ರೇಷ್ಠ ಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆ ಎಂದರು. ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ, ಬ್ಲಾಕ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಸುಧಾಕರ ಕೋಟ್ಯಾನ್ ಮಾತನಾಡಿದರು.

ಸೇರ್ಪಡೆ
ಕುಕ್ಕುಂದೂರು ಗ್ರಾಮ ಪಂಚಾಯತ್‌ಗೆ 3 ಬಾರಿ ಸದಸ್ಯರಾಗಿ, ಪಂಚಾಯತ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಬಿಜೆಪಿಯ ಸುಂದರ ಅವರು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಅವರಿಗೆ ಪಕ್ಷದ ಧ್ವಜ ನೀಡಿ ಬರಮಾಡಿಕೊಳ್ಳಲಾಯಿತು.

ಸನ್ಮಾನ
ಇತ್ತೀಚೆಗೆ ನಡೆದ ವ್ಯವಸಾಯ ಸೇವಾ ಸಹಕಾರಿ ಸಂಘಗಳಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಿರಿಯಣ್ಣ ಶೆಟ್ಟಿ ಹಿರ್ಗಾನ, ಕೃಷ್ಣ ಶೆಟ್ಟಿ ನಲ್ಲೂರು, ಜಾನ್ ಆರ್. ಡಿ’ಸಿಲ್ವಾ ಸಾಣೂರು ಅವರನ್ನು ಸನ್ಮಾನಿಸಲಾಯಿತು.
ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಒಗ್ಗೂಡುವಿಕೆಯೊಂದಿಗೆ ಆರಂಭವಾಗಲಿರುವ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕಾರ್ಕಳ ಪ್ರವರ್ತಕರಾದ ಅನಿಲ್ ಪೂಜಾರಿ ಮಾಳ ಅವರು ಸೊಸೈಟಿಯ ಕುರಿತು ಮಾಹಿತಿ ಹಂಚಿಕೊಂಡರು.

ಬ್ಲಾಕ್ ಕಾಂಗ್ರೆಸ್ ಕೋಶಾಧಿಕಾರಿ ಉಮೇಶ್ ರಾವ್ ಬಜಗೋಳಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಡಿಸೋಜಾ, ಡಾ. ಪ್ರೇಮದಾಸ್ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ರಮೇಶ್ ಬಜಕಳ ನಾಡಗೀತೆ ಹಾಡಿದರು. ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನಾ ಸ್ವಾಗತಿಸಿ, ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷ ಅಜಿತ್ ಹೆಗ್ಡೆ ವಂದಿಸಿದರು. ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿದರು.





























































































































error: Content is protected !!
Scroll to Top