ಮೈಸೂರು : ಮುಡಾ ಹಗರಣದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಬೇನಾಮಿ ಆಸ್ತಿ ಹೊಂದಿರುವ ಆರೋಪ ಕೇಳಿಬಂದಿದ್ದು, ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರೇ ಬೇನಾಮಿ ಆಸ್ತಿ ಹೊಂದಿದ ಆರೋಪದಡಿ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಮೈಸೂರು ತಾಲೂಕು ಆಲನಹಳ್ಳಿ ಗ್ರಾಮದ ಸರ್ವೆ ನಂ 113/4ರಲ್ಲಿ 1 ಎಕರೆ ಭೂಮಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 1983ರ ಡಿಸೆಂಬರ್ 15 ರಂದು ಆಲನಹಳ್ಳಿಯ ಹನುಮೇಗೌಡ, ಹನುಮಯ್ಯ, ಕರಿಯಪ್ಪ ಹಾಗೂ ಕೆಂಪಮ್ಮ ಎಂಬುವರಿಂದ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಭೂಮಿ ಖರೀದಿ ಮಾಡಿದ್ದಾರೆ. 1996ರಲ್ಲಿ ಅಂತಿಮ ಅಧಿಸೂಚನೆ ಆಗಿರುವ ಭೂಮಿಯನ್ನು ಮಲ್ಲಿಕಾರ್ಜುನ ಸ್ವಾಮಿ ಡಿನೋಟಿಫೈ ಮಾಡಿಸಿದ್ದು, 2006 ರಲ್ಲಿ ಮಲ್ಲಿಕಾರ್ಜುನಸ್ವಾಮಿಯಿಂದ ಕೃಷಿ ಭೂಮಿಯನ್ನು ಅನ್ಯಕ್ರಾಂತ ಮಾಡಿಸಿ ಆದೇಶ ಹೊರಡಿಸಲಾಗಿದೆ. ಅದೇ ಭೂಮಿಯನ್ನು ಅವರು ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ 2010 ಅಕ್ಟೋಬರ್ 20ರಲ್ಲಿ ದಾನ ಮಾಡಿದ್ದಾರೆ. ಪಾರ್ವತಿ ಕೂಡ 2010ರ ನವೆಂಬರ್ 11ರಂದು ತಮ್ಮ ಮಗ ಯತೀಂದ್ರ ಸಿದ್ದರಾಮಯ್ಯಗೆ ದಾನ ಮಾಡಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ತಮಗೆ ಬಂದ ಭೂಮಿಯನ್ನ 2011ರ ಮಾರ್ಚ್ 23 ರಂದು ಬೇರೆಯವರಿಗೆ ಮಾರಾಟ ಮಾಡಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದಾರೆ.



























