ಕಾರ್ಕಳ : ರಾಜ್ಯಾದ್ಯಂತ ಎಲ್ಲ ತಾಲೂಕು ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಮುಷ್ಕರ ನಡೆಯುತ್ತಿದೆ. ಆದರೂ ಯಾವುದೇ ಜಿಲ್ಲೆಯ ಉಸ್ತುವಾರಿ ಸಚಿವರಾಗಲಿ ಹಾಗೂ ಉನ್ನತ ಮಟ್ಟದ ಅಧಿಕಾರಿಗಳಾಗಲಿ ಸೌಜನ್ಯಕ್ಕೂ ಭೇಟಿ ನೀಡಿ ಅಧಿಕಾರಿಗಳ ಬೇಡಿಕೆಗಳನ್ನು ಆಲಿಸಿರುವುದಿಲ್ಲ. ಸಂಬಂಧಪಟ್ಟ ಇಲಾಖಾ ಸಚಿವರು ಹಾಗೂ ಸರಕಾರ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸದೇ ಕಿವಿ ಕೇಳದಂತೆ – ಕಣ್ಣಿಗೆ ಕಾಣದಂತೆ ವರ್ತಿಸುತ್ತಿದ್ದು ಇದೊಂದು ಸಂವೇದನಾಶೀಲ ರಹಿತ ಸರಕಾರವಾಗಿದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಖೇದ ವ್ಯಕ್ತಪಡಿಸಿದರು.
ಅವರು ಕಾರ್ಕಳ ತಾಲೂಕು ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಮುಷ್ಕರದಲ್ಲಿ ಭಾಗವಹಿಸಿ ಮಾತನಾಡಿದರು.
ಸರಕಾರವೇ ಹೊಣೆ
ಸಾರ್ವಜನಿಕರಿಗೆ ದೊರೆಯುವಂತ ಸೇವೆಯಲ್ಲಿ ಅವಶ್ಯಕವಾಗಿ ಬೇಕಾಗಿರುವ ಜಾತಿ, ಆದಾಯ ಪ್ರಮಾಣ ಪತ್ರಗಳ ಸಿಗುವಲ್ಲಿ ವ್ಯತ್ಯಯ ಕಂಡುಬರುತ್ತಿದೆ. ಜನತೆ ತೊಂದರೆ ಅನುಭವಿಸುತ್ತಿದ್ದಾರೆ. ಇದಕ್ಕೆ ಸರ್ಕಾರವೇ ನೇರ ಹೊಣೆ ಎಂದು ಟೀಕಿಸಿದರು.
ವೇತನ ಹೆಚ್ಚಳ, ಮೂಲಭೂತ ಸೌಕರ್ಯಗಳು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆ ಸೇರಿದಂತೆ ಹತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಫೆ. 10ರಿಂದ ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಮುಷ್ಕರ 6ನೇ ದಿನಕ್ಕೆ ಕಾಲಿಟ್ಟರೂ ಈವರೆಗೆ ಸರಕಾರ ಮಾತ್ರ ಸ್ಪಂದಿಸುವ ಲಕ್ಷಣಗಳು ಗೋಚರಿಸುತ್ತಿಲ್ಲ. ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರದಿಂದ ಜನಸಾಮಾನ್ಯರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರು.
23 ಅಂಶಗಳ ಬೇಡಿಕೆ
ಬಹುತೇಕ ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿಗಳು ಶಿಥಿಲಾವಸ್ಥೆಯಲ್ಲಿದೆ. ಗುಣಮಟ್ಟದ ಪೀಠೋಪಕರಣಗಳು, ದಾಖಲೆಗಳ ಅಪ್ ಲೋಡ್ ಗಳಿಗೆ ಬೇಕಾದ ಸ್ಮಾರ್ಟ್ ಫೋನ್, ಲ್ಯಾಪ್ ಟಾಪ್, ಪ್ರಿಂಟರ್ ಹಾಗೂ ಸ್ಕ್ಯಾನರ್ ಪೂರೈಸುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಇದಲ್ಲದೇ ಕಂದಾಯ ಇಲಾಖೆಯ ಒಟ್ಟು 21 ಮೊಬೈಲ್ ತಂತ್ರಾಂಶಗಳ ನಿರ್ವಹಣೆಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನವನ್ನು ಗ್ರಾಮ ಆಡಳಿತಾಧಿಕಾರಿಗಳಿಗೆ ನಿಗದಿಪಡಿಸಬೇಕು. ನೌಕರರಿಗೆ ಅಂತರ್ ಜಿಲ್ಲಾ ವರ್ಗಾವಣೆ ಅಥವಾ ಇತರೇ ಇಲಾಖೆಗಳಂತೆ ವರ್ಗಾವಣೆಗೆ ವಿಶೇಷ ಮಾರ್ಗಸೂಚಿ ರಚಿಸಬೇಕು. ಗ್ರಾಮ ಆಡಳಿತಾಧಿಕಾರಿಗಳು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಮೃತಪಟ್ಟರೆ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡುವಂತೆ ಮನವಿಯಲ್ಲಿ ಸರ್ಕಾರವನ್ನು ಒತ್ತಾಯಿಸಲಾಗಿದೆ. ಚುನಾವಣೆ, ಅತಿವೃಷ್ಟಿ, ಅನಾವೃಷ್ಟಿ ಸಂದರ್ಭಗಳಲ್ಲಿ ಹಾಗೂ ಸಾರ್ವಜನಿಕ ಸೇವೆಗಳನ್ನು ನೀಡುವ ಸಂದರ್ಭದಲ್ಲಿ ದೈಹಿಕ ಹಲ್ಲೆ, ಕೊಲೆ ಪ್ರಕರಣಗಳು ಕೇಳಿಬರುತ್ತಿದೆ. ಪೊಲೀಸ್ ಇಲಾಖೆಯಲ್ಲಿ ನೀಡುತ್ತಿರುವ ಒಂದು ತಿಂಗಳ ಹೆಚ್ಚುವರಿ ವೇತನ ಹಾಗೂ ಹಾಲಿ ಪ್ರಯಾಣ ಭತ್ಯೆಯನ್ನು 500 ರೂಪಾಯಿಯಿಂದ 5 ಸಾವಿರಕ್ಕೆ ಏರಿಸುವಂತೆ, ವಂಶವೃಕ್ಷ, ಜಾತಿ ಪ್ರಮಾಣ ಪತ್ರಗಳ ವಿತರಣೆ ಸಂದರ್ಭದಲ್ಲಿ ತಪ್ಪು ಮಾಹಿತಿ ನೀಡಿದ ಅರ್ಜಿದಾರರ ಬದಲಿಗೆ ಗ್ರಾಮ ಆಡಳಿತಾಧಿಕಾರಿಗಳ ಮೇಲೆ ಎಫ್.ಐ.ಆರ್. ದಾಖಲಿಸುತ್ತಿದ್ದು ಇದರ ಬದಲಿಗೆ ಅರ್ಜಿದಾರರನ್ನೇ ಹೊಣೆಗಾರರಾಗಿಸಬೇಕು. ಬೆಳೆ ಸಮೀಕ್ಷೆ ಬೆಳೆ ಪರಿಹಾರದ ಕೆಲಸವನ್ನು ಕೃಷಿ ಅಥವಾ ತೋಟಗಾರಿಕೆಗೆ ವಹಿಸುವಂತೆ ನಿರ್ದೇಶಿಸಬೇಕು, ಮ್ಯುಟೇಶನ್ ಅವಧಿ ವಿಸ್ತರಣೆ, ಪ್ರೊಟೊಕಾಲ್ ಕೆಲಸದಿಂದ ವಿನಾಯಿತಿ ಹಾಗೂ ದವರ್ ಮತ್ತು ಜಮಾಬಂಧಿಯನ್ನು ರದ್ದುಪಡಿಸಬೇಕು ಮಾತ್ರವಲ್ಲದೇ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆ ಒದಗಿಸುವ ಬೇಡಿಕೆಯನ್ನು ಈಡೇರಿಸಬೇಕೆಂದು ಒಟ್ಟು 23 ಅಂಶಗಳನ್ನು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಅಧಿವೇಶನದಲ್ಲಿ ಪ್ರಸ್ತಾಪ
ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿದ ಶಾಸಕರು ಶೀಘ್ರವಾಗಿ ಸರಕಾರದ ಗಮನಕ್ಕೆ ತರುತ್ತೇನೆ. ಮಾತ್ರವಲ್ಲದೇ, ಮುಂದಿನ ಅಧಿವೇಶನದಲ್ಲಿ ಈ ಕುರಿತು ಸಮಗ್ರವಾಗಿ ಚರ್ಚಿಸಿ, ಸರಕಾರದ ಗಮನ ಸೆಳೆಯುತ್ತೇನೆ ಎಂದು ಭರವಸೆ ನೀಡಿದರು.






























































